ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಡಾ.ಡಿ.ವೀರೇಂದ್ರ ಹೆಗ್ಗಡೆ ತನ್ನ ಸಾರ್ಥಕ ಬದುಕಿನ ಪ್ರೇರಕರು, ಮಾರ್ಗದರ್ಶಕರು ಹಾಗೂ ಗುರುಗಳಾಗಿದ್ದು, ತಾನು ಅವರ ಅಭಿಮಾನಿ ಶಿಷ್ಯ. ಅವರ ದಕ್ಷ ನಾಯಕತ್ವ, ತಾಳ್ಮೆ, ವಿವೇಕ, ಸಂಯಮ ಹಾಗೂ ಸ್ಥಿತಪ್ರಜ್ಞ ಗುಣದ ಮೂಲಕ ಕಲಿಯುಗ ಕಲ್ಪವಕ್ಷ, ಕಾಮಧೇನು ಎಂದೆನಿಸಿದ್ದಾರೆ. ರಾಜನೂ, ಋಷಿಯೂ ಆಗಿರುವ ಹೆಗ್ಗಡೆಯವರು ನಿಜವಾದ ಅರ್ಥದಲ್ಲಿ ‘ರಾಜರ್ಷಿ’ ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು.
ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಭಾನುವಾರ ಮಂಗಳೂರು, ಬೆಂಗಳೂರು, ಹಾಸನ, ಉಡುಪಿ, ಉಜಿರೆ, ಧಾರವಾಡ ಹಾಗೂ ಮೈಸೂರಿನಲ್ಲಿರುವ ಕೆ.ಜಿ.ಯಿಂದ ಪಿ.ಜಿ.ವರೆಗಿನ 56 ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಸುಮಾರು 10,000 ಹಿರಿಯ ವಿದ್ಯಾರ್ಥಿಗಳ ಸಮಾವೇಶದಲ್ಲಿ ಮಾತನಾಡಿದರು.
ಪಾರಂಪರಿಕ ಚಿಕಿತ್ಸಾ ಪದ್ಧತಿಗಳಾದ ಆಯುರ್ವೇದ, ಪ್ರಕೃತಿ ಚಿಕಿತ್ಸೆ ಮತ್ತು ಯೋಗಾಭ್ಯಾಸಗಳಿಗೆ ಹೆಗ್ಗಡೆ ಸೇವೆ ಮತ್ತು ಕೊಡುಗೆ ಅದಮ್ಯ. ಉಡುಪಿಯಲ್ಲಿರುವ ಎಸ್‌ಡಿಎಂ ಆಯುರ್ವೇದ ಕಾಲೇಜು ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಹಾಸನ ಮತ್ತು ಬೆಂಗಳೂರಿನಲ್ಲಿರುವ ಎಸ್‌ಡಿಎಂ ಆಯುರ್ವೇದ ಕಾಲೇಜುಗಳು ಮತ್ತು ಆಸ್ಪತ್ರೆ ಉತ್ತಮ ರೀತಿಯಲ್ಲಿ ಸೇವೆ ನೀಡುತ್ತಿವೆ. ಉಜಿರೆ ಮತ್ತು ಧರ್ಮಸ್ಥಳದಲ್ಲಿರುವ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಕೂಡಾ ಉತ್ತಮ ಸೇವೆಯಲ್ಲಿ ಚಿರಪರಿಚಿತವಾಗಿವೆ ಎಂದರು.
ಪೂನಾದ ಕಾನೂನು ಕಾಲೇಜಿನ ಡೀನ್ ಪ್ರೊ.ಶಶಿಕಲಾ ಗುರುಪುರ, ಧಾರವಾಡದ ಎಸ್.ಡಿ.ಎಂ. ವೈದ್ಯಕೀ ಕಾಲೇಜಿನ ಡಾ.ಅನಿಲ್, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಸಿಂಹ ನಾಯಕ್ ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಕಟಿಬದ್ಧರಾಗಿರುವುದಾಗಿ ಭರವಸೆ ನೀಡಿದರು.
ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು. ಹೇಮಾವತಿ ವೀ.ಹೆಗ್ಗಡೆ, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಶ್ರದ್ಧಾ ಅಮಿತ್, ಶ್ರೇಯಸ್ ಕುಮಾರ್ ಉಪಸ್ಥಿತರಿದ್ದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಪ್ರೊ.ಎಸ್.ಸತೀಶ್ಚಂದ್ರ ಸ್ವಾಗತಿಸಿದರು. ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಸಿಇಒ ಬಿ.ಪಿ.ಸಂಪತ್ ಕುಮಾರ್ ನಿರ್ವಹಿಸಿದರು. ಎಸ್‌ಡಿಎಂ ಸ್ವಾಯತ್ತ ಕಾಲೇಜು ಪ್ರಾಂಶುಪಾಲ ಪ್ರೊ.ಪಿ.ವಿಶ್ವನಾಥ ವಂದಿಸಿದರು.
ದೇವರ ಅನುಗ್ರಹದೊಂದಿಗೆ, ಎಲ್ಲರ ಪ್ರೀತಿವಿಶ್ವಾಸ, ಗೌರವ ಹಾಗೂ ಅಭಿಮಾನವೇ ತಮಗೆ ಶ್ರೀರಕ್ಷೆೆ. ತನ್ನ ಸೇವಾ ಕಾರ್ಯ ಮುಂದುವರಿಸಲು ಸ್ಫೂತಿಯಾಗಿದೆ. ಎಲ್ಲಾ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಕಡಿಮೆ ಶುಲ್ಕದಲ್ಲಿ ಉತ್ತಮ ಗುಣಮಟ್ಟದ ಸಂಸ್ಕಾರಯುತ ಶಿಕ್ಷಣ ನೀಡಲಾಗುತ್ತದೆ. ಮಾನವೀಯ ಮೌಲ್ಯಗಳ ಉದ್ದೀಪನದೊಂದಿಗೆ ಸಮಾಜದ ಸಭ್ಯ ಸುಸಂಸ್ಕೃತ ನಾಗರಿಕರನ್ನು ರೂಪಿಸಲಾಗುತ್ತದೆ. ಡಾ.ಡಿ.ವೀರೇಂದ್ರ ಹೆಗ್ಗಡೆ ಧರ್ಮಾಧಿಕಾರಿ ಡಾ.ಹೆಗ್ಗಡೆ ಹಾಗೂ ಧರ್ಮಸ್ಥಳದ ಬಗ್ಗೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಅಪಪ್ರಚಾರ ಮತ್ತು ವದಂತಿಗಳು ಖಂಡನೀಯ. ಡಾ.ಹೆಗ್ಗಡೆಯವರೊಂದಿಗೆ ಹಿರಿಯ ವಿದ್ಯಾರ್ಥಿಗಳೆಲ್ಲರೂ ‘ಧರ್ಮ ಸಿಪಾಯಿ’ಗಳಾಗಿ ಧರ್ಮಸ್ಥಳದ ಪಾವಿತ್ರ್ಯ ರಕ್ಷಣೆಗೆ ಸದಾ ಸಿದ್ಧರೂ, ಬದ್ಧರೂ ಆಗಿರುತ್ತೇವೆ. ಡಾ.ಎಂ.ಮೋಹನ ಆಳ್ವ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ