ಜಿಲ್ಲೆ

ಇಂದು ದ್ವಿತೀಯ ಪಿಯು ಪರೀಕ್ಷೆ

Kodagu

ಮಡಿಕೇರಿ: ಜೂ18 (ಗುರುವಾರ) ದಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಕೊಡಗು ಜಿಲ್ಲೆಯ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆಗಳು ನಡೆದಿವೆ.

ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡುವುದು, ಹೆಚ್ಚುವರಿ ಕೊಠಡಿ ಕಾಯ್ದಿರಿಸುವುದು ಸೇರಿದಂತೆ ವಿವಿಧ ಬಗೆಯ ಸಿದ್ಧತೆಗಳನ್ನು ಜಿಲ್ಲಾಡಳಿತ ಕೈಗೊಂಡಿದ್ದು, ಸೂಸೂತ್ರವಾಗಿ ಪರೀಕ್ಷೆ ನಡೆಸಲು ವ್ಯವಸ್ಥೆ ಮಾಡಿಕೊಂಡಿದೆ.

ಜಿಲ್ಲೆಯ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 5,927 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 477 ಹೊರ ಜಿಲ್ಲೆಯ ಮತ್ತು 5 ಹೊರ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸಂಬಂಧ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶಿವಲಿಂಗ ಶೆಟ್ಟಿ ವಿಜಯವಾಣಿಗೆ ತಿಳಿಸಿದ್ದಾರೆ.

ಪರೀಕ್ಷಾ ಕೇಂದ್ರ: ಗೋಣಿಕೊಪ್ಪಲು ಕಾವೇರಿ ಪದವಿ ಪೂರ್ವ ಕಾಲೇಜು, ನಾಪೋಕ್ಲು, ಪೊನ್ನಂಪೇಟೆ, ಸೋಮವಾರಪೇಟೆ, ವಿರಾಜಪೇಟೆ, ಮಡಿಕೇರಿ, ಕುಶಾಲನಗರ, ನೆಲ್ಯಹುದಿಕೇರಿ ಮತ್ತು ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂರ್ನಾಡು ಪದವಿ ಪೂರ್ವ ಕಾಲೇಜು, ಚೇರಂಬಾಣೆ ಅರುಣಾ ಪದವಿ ಪೂರ್ವ ಕಾಲೇಜು, ಕೊಡ್ಲಿಪೇಟೆ ಪದವಿ ಪೂರ್ವ ಕಾಲೇಜು, ಶ್ರೀಮಂಗಲ ಪದವಿ ಪೂರ್ವ ಕಾಲೇಜು, ಶನಿವಾರಸಂತೆ ಪದವಿ ಪೂರ್ವ ಕಾಲೇಜು, ಮಡಿಕೇರಿ ಸೇಂಟ್ ಮೈಕಲರ ಪದವಿ ಪೂರ್ವ ಕಾಲೇಜು ಹಾಗೂ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜುಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ: ಪರೀಕ್ಷಾ ಅಕ್ರಮ ತಡೆಯಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಸ್ಥಳವೆಂದು ಜಿಲ್ಲಾಕಾರಿ ಅನೀಸ್ ಕಣ್ಮಣಿ ಜಾಯ್ ಘೋಷಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ ಅಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ನಿರ್ಬಂಧ ಚಾಲ್ತಿಯಲ್ಲಿರುತ್ತದೆ.