ಜಿಲ್ಲೆ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಲೋಪವಾಗದಿರಲಿ: ಎಡಿಸಿ ಬಿ.ಸಿ.ಶಿವಾನಂದಮೂರ್ತಿ ಸೂಚನೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಜಿಲ್ಲೆಯಲ್ಲಿ ಜೂ.20 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದೆ. ಯಾವುದೇ ಲೋಪದೋಷವಿಲ್ಲದೆ ಸುಗಮವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 7 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. 2,472 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸಂಬಂಧಪಟ್ಟ ಕೇಂದ್ರಕ್ಕೆ ತಲುಪಿಸಲು 5 ಮಾರ್ಗಗಳನ್ನು ನಿಗದಿ ಮಾಡಲಾಗಿದೆ. ಇವುಗಳನ್ನು ಕಾರ್ಯನಿರ್ವಹಿಸಲು ತಹಸೀಲ್ದಾರ್, ಬಿಇಒ ಹಾಗೂ ಪ್ರಾಂಶುಪಾಲರನ್ನೊಳಗೊಂಡ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ ಎಂದು ಹೇಳಿದರು.

ಉತ್ತಮ ಮೂಲ ಸೌಕರ್ಯ ಮತ್ತು ಪೀಠೋಪಕರಣ ಹೊಂದಿರುವ 7 ಕಾಲೇಜನ್ನು ಪರೀಕ್ಷಾ ಕೇಂದ್ರವನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳಿಗೆ ಕುಡಿಯುವ ನೀರು, ಶೌಚಗೃಹ ಹಾಗೂ ಇನ್ನಿತರ ಅಗತ್ಯ ಸೌಕರ್ಯಗಳು ಪರಿಶೀಲಿಸಬೇಕು. 7 ಕೇಂದ್ರಗಳಲ್ಲಿ ಸಿ.ಸಿ ಕ್ಯಾಮೆರಾ ಅಳವಡಿಕೆಯಾಗಿದೆ. ವೆಬ್ ಕಾಸ್ಟಿಂಗ್ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ಸುಗಮವಾಗಿ ನಡೆಸಲು ಮುಖ್ಯ ಅಧೀಕ್ಷಕರನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಒದಗಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕೇಂದ್ರದ ಸುತ್ತ 200 ಮೀ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ ಮುಚ್ಚಿಲು ಆದೇಶಿಸಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಚಲುವಯ್ಯ, ನಗರಸಭೆಯ ಪರಿಸರ ಇಂಜಿನಿಯರ್ ರುದ್ರೇಗೌಡ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಇತರರಿದ್ದರು.