ಕುಶಾಲನಗರ: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 10 ಅಂಗನವಾಡಿ ಕೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಕೂಡುಮಂಗಳೂರು ಅಂಗನವಾಡಿ ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ ನಡೆಯಿತು.
ಸೋಮವಾರಪೇಟೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಷಣಾ ಅಭಿಯಾನ, ಪೌಷ್ಟಿಕ ಆಹಾರ ಸಪ್ತಾಹದ ಅಡಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್ ಉದ್ಘಾಟಿಸಿ ಮಾತನಾಡಿ, ಸರ್ಕಾರದ ಯೋಜನೆಯನ್ನು ಮಹಿಳೆಯರು ಸದುಪಯೋಗಪಡಿಸಿಕೊಳ್ಳುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸಾವಿತ್ರವ್ವ ಇಲಾಖೆಯ ಮಾಹಿತಿಯನ್ನು ಸವಿಸ್ತಾರವಾಗಿ ಸಭೆಯಲ್ಲಿ ತಿಳಿಸಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯ 15 ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಗ್ರಾಪಂ ಸದಸ್ಯರಾದ ಎಂ.ಡಿ.ಹರೀಶ್, ಕೆ.ಎಸ್.ಮಂಜು, ಚೈತ್ರಾ ಮಂಜುನಾಥ, ಪಿಡಿಒ ಸಂತೋಷ್, ಘೋಷಣಾ ಅಭಿಯಾನ ತಾಲೂಕು ಸಂಯೋಜಕ ಕೆ.ಎನ್.ರಂಜಿತ್, ಆರೋಗ್ಯ ಇಲಾಖೆ ಅಧಿಕಾರಿಗಳಾದ ಮುಖೇಶ್, ಸಗೀನ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.