ಶಿವಮೊಗ್ಗ: ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ರಾಜ್ಯ ನಾಯಕರೊಂದಿಗೆ ಕೇಂದ್ರದ ನಾಯಕರು ಚರ್ಚೆ ಮಾಡಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಬಗ್ಗೆ ದೆಹಲಿ ಮಟ್ಟದಲ್ಲಿ ಏನು ಚರ್ಚೆ ಆಗಿದೆ ಎಂಬ ನಿಖರ ಮಾಹಿತಿ ಇಲ್ಲ. ಎಲ್ಲವನ್ನೂ ತುಲನೆ ಮಾಡಿ ವರಿಷ್ಠರು ತೀರ್ಮಾನ ಕೈಗೊಳ್ಳುವರು ಎಂದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿನ ಸೋಲು-ಗೆಲುವು ಎರಡನ್ನೂ ಸರಿ ಸಮಾನವಾಗಿ ತೆಗೆದುಕೊಂಡು ಮುನ್ನೆಡೆಯುವ ಸಾಮರ್ಥ್ಯ ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನಿಗೂ ಇದೆ. ಕಾಂಗ್ರೆಸ್ ಸರ್ಕಾರ ಬಂದು ನಾಲ್ಕು ತಿಂಗಳು ಕಳೆದಿದೆ. ಅವರ ಪಕ್ಷದಲ್ಲೇ ಅಸಮಾಧಾನ ಭುಗಿಲೆದ್ದಿದೆ. ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಶಾಸಕರಲ್ಲೇ ಅಸಮಾಧಾನ ಹೆಚ್ಚುತ್ತಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರದ ಬಗ್ಗೆ ನಮಗೇನು ಭಯವಿಲ್ಲ. ಚುನಾವಣಾ ಪೂರ್ವದಲ್ಲಿ ಏನೆಲ್ಲ ಭರವಸೆ ಕೊಟ್ಟಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ರಾಜ್ಯದ ಜನತೆ ಶಾಪ ಹಾಕುತ್ತಿದ್ದಾರೆ ಎಂದು ದೂರಿದರು.