ಪಂಚಾಯತ್ ರಾಜ್ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ತಿ.ನರಸೀಪುರ ತಾಲೂಕಿನ ಸೋಮನಾಥಪುರ ಗ್ರಾಮದಲ್ಲಿ ಬಂದ್ ಆಗಿರುವ ಗ್ರಾಮ ಪಂಚಾಯಿತಿ ಕಾರ್ಯಾಲಯ. 
ಜಿಲ್ಲೆ

ಗ್ರಾಪಂ ಕಚೇರಿಗಳಲ್ಲಿ ಸಾರ್ವಜನಿಕ ಸೇವೆ ಸಂಪೂರ್ಣ ಸ್ಥಗಿತ

ನಾಗೇಶ ಎಸ್

ತಿ.ನರಸೀಪುರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದಿಂದ ತಾಲೂಕಿನ 36 ಗ್ರಾಮ ಪಂಚಾಯಿತಿಗಳು ಬಾಗಿಲು ಮುಚ್ಚಿದ್ದು, ಸಾರ್ವಜನಿಕರ ಸೇವೆ ಸಂಪೂರ್ಣ ಸ್ಥಗಿತಗೊಂಡಿದೆ.

ಕಳೆದ ಸೋಮವಾರದಿಂದ ಪಂಚಾಯತ್‌ರಾಜ್ ಇಲಾಖೆ ಸಿಬ್ಬಂದಿ ಮುಷ್ಕರ ನಡೆಸುತ್ತಿರುವುದರಿಂದ ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳು ಬಿಕೋ ಎನ್ನುತ್ತಿವೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿಗಳು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು, ಕರ ವಸೂಲಿಗಾರರು, ನೀರುಗಂಟಿಗಳು ಸೇರಿದಂತೆ ನೌಕರರ ಬೇಡಿಕೆಗಳ ಈಡೇರಿಕೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ.
ಕಂದಾಯ ಇಲಾಖೆ ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟದ ಬಳಿಕ ಪಂಚಾಯತ್‌ರಾಜ್ ನೌಕರರು ಮುಷ್ಕರದ ಹಾದಿ ಹಿಡಿದಿದ್ದಾರೆ. ಗ್ರಾಮ ಪಂಚಾಯಿತಿಗಳು ಸ್ವಯಂ ಸರ್ಕಾರವಾಗಿ ಆಡಳಿತ ನಡೆಸಲು ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಶಾಸನಸಭೆಯ ಜನಪ್ರತಿನಿಧಿಗಳು ಅವಕಾಶ ನೀಡದಿರುವುದನ್ನು ಖಂಡಿಸಿ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟವೂ ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿ, ಮುಷ್ಕರನಿರತರ ಜತೆ ಪ್ರತಿಭಟನೆ ನಡೆಸುತ್ತಿದ್ದಾರೆ.