ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-1ರ ನ್ಯಾಯಾಧೀಶರು 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದ್ದಾರೆ.
ಶಿಕಾರಿಪುರ ತಾಲೂಕಿನ 23 ವರ್ಷದ ಯುವಕ ಶಿಕ್ಷೆಗೆ ಒಳಗಾದವ. 2023ನೇ ಸಾಲಿನಲ್ಲಿ ಈತ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ. ಈ ಬಗ್ಗೆ ಶಿರಾಳಕೊಪ್ಪ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಪ್ರಕರಣದ ಅಂದಿನ ತನಿಖಾಧಿಕಾರಿ ಆಗಿದ್ದ ಶಿಕಾರಿಪುರ ಡಿವೈಎಸ್ಪಿ ಶಿವಾನಂದ ಎಸ್ ಮದರಖಂಡಿ ಅವರು ಪ್ರಕರಣದ ತನಿಖೆ ಪೂರೈಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶೆ ಲತಾ ಅವರು ಯುವಕನಿಗೆ ಕಠಿಣ ಶಿಕ್ಷೆ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲನಾದಲ್ಲಿ 4 ತಿಂಗಳು ಸಾಧಾ ಕಾರಾವಾಸ ಶಿಕ್ಷೆ ವಿಧಿಸಿದ್ದು, ಬಾಲಕಿಗೆ ಪರಿಹಾರವಾಗಿ ದಂಡದ ಮೊತ್ತದಲ್ಲಿ 45 ಸಾವಿರ ರೂ. ಮತ್ತು ಸರ್ಕಾರದಿಂದ 7 ಲಕ್ಷ ರೂ. ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಎಸ್.ಹರಿಪ್ರಸಾದ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.