ಶಿವಮೊಗ್ಗ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸೊ)ರ ನ್ಯಾಯಾಧೀಶರು 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 2.20 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲನಾದರೆ 6 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ ವಿಧಿಸಲಾಗಿದೆ. ಸಂತ್ರಸ್ತೆಗೆ ದಂಡದಲ್ಲಿ 2 ಲಕ್ಷ ರೂ. ಮತ್ತು ಪರಿಹಾರವಾಗಿ 2 ಲಕ್ಷ ರೂ. ನೀಡುವಂತೆ ಆದೇಶಿಸಿದ್ದಾರೆ.
ದಾವಣಗೆರೆಯ 27 ವರ್ಷದ ಯುವಕ ಕಠಿಣ ಶಿಕ್ಷೆಗೆ ಗುರಿಯಾದವ. ಈತ 2021ರಲ್ಲಿ 16 ವರ್ಷದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ನೊಂದ ಬಾಲಕಿ ಭದ್ರಾವತಿ ಗ್ರಾಮಾಂತರ ಠಾಣೆಗೆ ನೀಡಿದ್ದಳು. ಅಂದಿನ ತನಿಖಾಧಿಕಾರಿಯಾಗಿದ್ದ ಭದ್ರಾವತಿ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಚೈತನ್ಯ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್.ಮೋಹನ್, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಮತ್ತು ಶ್ರೀಧರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.