ವಿಜಯವಾಣಿ ಸುದ್ದಿಜಾಲ ಧಾರವಾಡ
ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸುವುದು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತ ವಿದ್ಯಾರ್ಥಿ -ೆಡರೇಷನ್ (ಎಸ್‌ಎಫ್ಐ) ಜಿಲ್ಲಾ ಸಂಘಟನಾ ಸಮಿತಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಕೆಸಿಡಿ ಕ್ಯಾಂಪಸ್‌ನಿ0ದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ಮಾನವ ಸರಪಳಿ ನಿರ್ಮಿಸಲಾಯಿತು. ಪ್ರತಿಭಟನಾ ಧರಣಿ ನಡೆಸಿ ಅಹವಾಲುಗಳ ಮನವಿಯನ್ನು ಜಿಲ್ಲಾ ಪಂಚಾಯಿತಿ ಸಿಇಒ, ಬಿಸಿಎಂ, ಸಮಾಜ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಽಕಾರಿಗಳಿಗೆ ಸಲ್ಲಿಸಲಾಯಿತು.
ವಸತಿ ನಿಲಯದ ಮೇಲ್ವಿಚಾರಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯಾರ್ಥಿಗಳ ಆಹಾರ ಭತ್ಯೆಯನ್ನು ಕನಿಷ್ಠ 4,500 ರೂ.ಗೆ ಏರಿಸಬೇಕು. ಅರ್ಜಿ ಹಾಕಿದ ಎಲ್ಲ ವಿದ್ಯಾರ್ಥಿಗಳಿಗೂ ವಸತಿ ಸೌಲಭ್ಯ ಕಲ್ಪಿಸಬೇಕು. ನಗರಕ್ಕೆ 10 ಹಾಗೂ ಜಿಲ್ಲೆಗೆ 46 ಹಾಸ್ಟೆಲ್ ಮಂಜೂರು ಮಾಡಬೇಕು. ವಿದ್ಯಾರ್ಥಿನಿಯರ ಹಾಸ್ಟೆಲ್‌ಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಿ ಪ್ರತಿ ತಿಂಗಳು ಸಭೆ ನಡೆಸಬೇಕು. ಯುಪಿಎಸ್, ಟಿವಿ, ಕ್ರೀಡಾ ಸಾಮಗ್ರಿಗಳನ್ನು ಒದಗಿಸುವುದು ಸೇರಿ 25 ಬೇಡಿಕೆಗಳ ಪಟ್ಟಿ ಸಲ್ಲಿಸಲಾಯಿತು.
ಎಸ್‌ಎಫ್ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಎಸ್., ಜಿಲ್ಲಾಧ್ಯಕ್ಷ ನಾಗರಾಜ ಛಲವಾದಿ, ಶ್ರೀನಿವಾಸ ಎಚ್., ಅರುಣ ನಾಗವತ್, ಚೈತ್ರಾ ಶಿವನಣ್ಣನವರ, ರುದ್ರೇಶ ನಾಯಕ್, ಸಂಗೀತಾ, ಶಿವಕುಮಾರ್ ನಾಯಕ್, ಲಕ್ಷ್ಮೀ ತಳವಾರ, ಸಂಜನಾ, ಇಶ್ರತ್ ಭಾನು, ಶ್ವೇತಾ ಕೆ., ಮನೋಹರಿ, ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.