ಮುರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯೋಗೇಶ್, ಪ್ರಗಾಶ್ ನಾಥನ್, ಮಹದೇವಸ್ವಾಮಿ, ಮಂಜೇಶ್ ಇತರರು ಇದ್ದರು. 
ಜಿಲ್ಲೆ

ಓದಿಗೆ ಒತ್ತು ನೀಡಿ ಭವಿಷ್ಯ ರೂಪಿಸಿಕೊಳ್ಳಿ

ಲೋಕೇಶ್ ಮನು. ಡಿ

ಹನೂರು: ಪ್ರತಿಯೊಬ್ಬರೂ ಓದಿನ ಕಡೆ ಹೆಚ್ಚಿನ ಒತ್ತನ್ನು ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಶಾಸಕ ಎಂ.ಆರ್.ಮಂಜುನಾಥ್ ಕಿವಿಮಾತು ಹೇಳಿದರು.

ಹನೂರಿನ ಆರ್.ಎಸ್.ದೊಡ್ಡಿ ಬಳಿಯ ಮುರಾರ್ಜಿ ದೇಸಾಯಿ ಪದವಿ ಪೂರ್ವ ವಿಜ್ಞಾನ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಣ ಭವಿಷ್ಯದ ಅಡಿಗಲ್ಲು. ಹಾಗಾಗಿ ಪ್ರತಿಯೊಬ್ಬರೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಪ್ರಪಂಚದ ಜ್ಞಾನದ ಜತೆಗೆ ನಿರ್ದಿಷ್ಟ ಗುರಿ ಹೊಂದುವುದರ ಮೂಲಕ ಯಶಸ್ಸು ಸಾಧಿಸಬೇಕು. ಇದರಿಂದ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಳ್ಳಬೇಕು. ಶಾಲೆ ಹಾಗೂ ಪಾಲಕರಿಗೆ ಕೀರ್ತಿ ತರಬೇಕು. ಪ್ರತಿ ವರ್ಷದಂತೆ ಈ ಬಾರಿಯೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಬೇಕು. ಈ ಬಗ್ಗೆ ಉಪನ್ಯಾಸಕರು ಅಗತ್ಯ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ಯೋಗೇಶ್ ಮಾತನಾಡಿ, ಕಾಲೇಜಿನಲ್ಲಿ ವಾಣಿಜ್ಯ, ಕಲಾ ವಿಭಾಗವನ್ನು ತೆರೆಯುವಂತೆ ಹಾಗೂ ಬೇಸಿಗೆ ವೇಳೆ ತಲೆದೂರುವ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವಂತೆ ಮನವಿ ಮಾಡಿದರು. ಇದಕ್ಕೆ ಶಾಸಕರು ಪ್ರತಿಕ್ರಿಯಿಸಿ, ಈಗಾಗಲೇ ಕಾಲೇಜು ಸಮೀಪದಲ್ಲಿನ ರಾಮನಗುಡ್ಡೆ ಕೆರೆಗೆ ನದಿ ಮೂಲದಿಂದ ನೀರು ತುಂಬಿಸಲು ಕ್ರಮ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ. ಹಾಗಾಗಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಯಾಗಲಿದೆ. ಇನ್ನು ವಾಣಿಜ್ಯ ಹಾಗೂ ಕಲಾ ವಿಭಾಗವನ್ನು ತೆರೆಯಲು ಅಗತ್ಯ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಸತಿ ಶಾಲೆಯ ಪ್ರಾಂಶುಪಾಲ ಪ್ರಗಾಶ್ ನಾಥನ್, ಉಪನ್ಯಾಸಕರಾದ ಮಹದೇವಸ್ವಾಮಿ, ಚಂದ್ರಶೇಖರ್, ಪಿಎಸಿಸಿ ನಿರ್ದೇಶಕ ಮಂಜೇಶ್ ಇತರರು ಇದ್ದರು.