ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗುವ ಬಗ್ಗೆ ಸರ್ಕಾರದ ಮುಂದೆ ಸದ್ಯಕ್ಕೆ ಯಾವುದೇ ಪ್ರಸ್ತಾಪವಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಸ್ಪಷ್ಟಪಡಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ಹಿಂದೆ ಡಿಸಿಎಂ ಆಗಿದ್ದಾಗಲೇ ಬೆಂಗಳೂರಿಗೆ ನೀರು ಕೊಂಡೊಯ್ಯುವ ಕುರಿತು ಚರ್ಚೆ ನಡೆಸಿದ್ದೆ. ಆದರೆ ಆ ಕುರಿತು ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಹೇಳಿದರು.
ಪ್ರಸ್ತುತ ಆರ್ಥಿಕ, ಸಾಮಾಜಿಕ ಜಾತಿ ಗಣತಿ ವರದಿ ಬಿಡುಗಡೆ ಬಗ್ಗೆ ಪರ-ವಿರೋಧ ವ್ಯಕ್ತವಾಗುತ್ತಿವೆ. ವಿರೋಧಗಳಿಗೆ ತಲೆಕೆಡಿಸಿಕೊಳ್ಳದೆ ಮುಂದಿನ ಸಚಿವ ಸಂಪುಟದಲ್ಲೇ ವರದಿ ಮಂಡನೆ ಮಾಡಲಿದ್ದೇವೆ. ಸಂಪುಟದಲ್ಲಿ ವರದಿ ಮಂಡನೆಯಾದ ನಂತರ ಸಾರ್ವಜನಿಕವಾಗಿ ಚರ್ಚೆಗೆ ಅವಕಾಶ ಕಲ್ಪಿಸಲಾಗುವುದು ಎಂದರು.
ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಹೈಕಮಾಂಡ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಮೂರೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿ-ಜೆಡಿಎಸ್ ಪಕ್ಷಗಳು ಸೇರಿ ಎನ್‌ಡಿಎ ಮೈತ್ರಿಕೂಟ ಮಾಡಿಕೊಂಡಿದ್ದರೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಜನಪರ ಕೆಲಸ ಮಾಡುತ್ತಿದ್ದೇವೆ. ಆ ಗ್ಯಾರಂಟಿಗಳು ನಮ್ಮ ಕೈಹಿಡಿಯಲಿವೆ ಎಂದು ಭರವಸೆ ನೀಡಿದರು.
ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಅವರು ಹಿಂದೆ ಚುನಾವಣೆಗೆ ಸ್ಪರ್ಧಿಸಿದ್ದರು. ಈಗ ಅವರ ಮನವೊಲಿಸುವ ಕೆಲಸ ನಡೆಯುತ್ತಿದೆ. ಬಂಡಾಯದ ಪ್ರಶ್ನೆಯೇ ಇಲ್ಲ. ಹಾಗಾಗಿ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ನಲ್ಲಿ ಯಾವುದೇ ಗೊಂದಲವಿಲ್ಲದೆ ಗೆಲುವು ಸಾಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಶಾಸಕ ಗೋಪಾಲಕೃಷ್ಣ ಬೇಳೂರು, ಎಂಎಲ್‌ಸಿ ಮಂಜುನಾಥ ಭಂಡಾರಿ, ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ರವಿಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಅನಿತಾಕುಮಾರಿ, ಮುಖಂಡರಾದ ಎಚ್.ಸಿ.ಯೋಗೇಶ್, ಎನ್.ರಮೇಶ್, ವಿಜಯಕುಮಾರ್ ಸಂತೇಕಡೂರು ಮತ್ತಿತರರಿದ್ದರು.