ಶಿವಮೊಗ್ಗ: ಆಶ್ರಯ ಬಡಾವಣೆಯ ಮನೆ ನಿರ್ಮಾಣ ಪೂರ್ಣಗೊಳಿಸಿ ಫಲಾನುಭವಿಗಳಿಗೆ ಕೂಡಲೇ ಹಸ್ತಾಂತರ ಮಾಡಬೇಕು. ಕಟ್ಟಡ ಕಾರ್ಮಿಕರಿಗೆ ನೀಡಬೇಕಾದ ಸವಲತ್ತುಗಳನ್ನು ಒದಗಿಸಬೇಕು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಷ್ಟ್ರಭಕ್ತರ ಬಳಗದಿಂದ ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ದೈವಜ್ಞ ಕಲ್ಯಾಣ ಮಂದಿರದಿಂದ ನಗರ ಪಾಲಿಕೆಯವರೆಗೆ ಆಶ್ರಯ ಲಾನುಭವಿಗಳು, ಕಟ್ಟಡ ಕಾರ್ಮಿಕರು ಮೆರವಣಿಗೆ ಮೂಲಕ ಆಗಮಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.
ಪಾಲಿಕೆ ಆವರಣದಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಗೋವಿಂದಾಪುರ ಆಶ್ರಯ ಬಡಾವಣೆಯ ಎಲ್ಲ ಮನೆಗಳನ್ನು ಪೂರ್ಣಗೊಳಿಸಿ, ವಿದ್ಯುತ್, ಕುಡಿಯುವ ನೀರು, ರಸ್ತೆ ಹಾಗೂ ನಗರ ಸಾರಿಗೆ ವ್ಯವಸ್ಥೆ, ಬೀದಿದೀಪ ವ್ಯವಸ್ಥೆ ಕಲ್ಪಿಸಿ ಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಬೇಕು ಎಂದು ಆಗ್ರಹಿಸಿದರು.
ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಬೇಕು. ಧನಸಹಾಯಕ್ಕಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ಪರಿಶಿಷ್ಟ ಜಾತಿ, ಪಂಗಡಗಳಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ ಬರಬೇಕಾಗಿರುವ ಅನುದಾನ ಬಿಡುಗಡೆಗೊಳಿಸಬೇಕು ಎಂದು ಒತ್ತಾಯಿಸಿದರು.
ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ನಗರಸಭೆ ಮಾಜಿ ಅಧ್ಯಕ್ಷ ಎಂ.ಶಂಕರ್, ಮಾಜಿ ಉಪಮೇಯರ್ ಶಂಕರ್ ಗನ್ನಿ, ಮಾಜಿ ಸದಸ್ಯ ಇ.ವಿಶ್ವಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಾಲಿಂಗಯ್ಯ ಶಾಸ್ತ್ರಿ ಇತರರಿದ್ದರು.