ಶಿವಮೊಗ್ಗ: ಶಿಕಾರಿಪುರದ ಕುಮದ್ವತಿ ಸೇತುವೆ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
ಶಿಕಾರಿಪುರ ಜಯನಗರದ ಚಂದ್ರಕಲಾ (40), ಲಕ್ಷ್ಮಿ (40) ಹಾಗೂ ರೇಖಾ (45) ಮೃತರೆಂದು ಗುರುತಿಸಲಾಗಿದೆ. ಇಲ್ಲಿನ ಕೊಪ್ಪದ ಕೆರೆಗೆ ಪೂಜೆ ಸಲ್ಲಿಸಲು ತೆರಳುತ್ತಿದ್ದ ಟಾಟಾ ಏಸಿ ವಾಹನಕ್ಕೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಅವಘಡದಲ್ಲಿ ಒಟ್ಟು ಆರು ಜನ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.