ಜಿಲ್ಲೆ

ಸ್ವಪಕ್ಷದವರು ಸುಮ್ಮನಿದ್ದರೆ ಎಲ್ಲವೂ ಸರಿಹೋಗುತ್ತೆ: ಸಚಿವ ಈಶ್ವರಪ್ಪ ಚಾಟಿ

Shivamogga

ಶಿವಮೊಗ್ಗ: ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಗೊಂದಲ ಮತ್ತು ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಬಗ್ಗೆ ಮಾತನಾಡುವ ಬದಲು ಸ್ವಲ್ಪ ದಿನ ಸುಮ್ಮನಿದ್ದರೆ ಎಲ್ಲವೂ ತನ್ನಿಂದ ತಾನೇ ಸರಿ ಹೋಗುತ್ತದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ರಾಜ್ಯದಲ್ಲಿ ಏನು ಮಾಡಬೇಕೆಂದು ರಾಷ್ಟ್ರೀಯ ನಾಯಕರು ಒಂದು ತೀರ್ಮಾನ ತೆಗೆದುಕೊಂಡಿದ್ದರು. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬಂದು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರ ನಾಯಕರ ಗಮನಕ್ಕೆ ತಂದರೂ ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಸರಿಯಲ್ಲ. ಇದು ಸರ್ಕಾರ ಮತ್ತು ಪಕ್ಷಕ್ಕೂ ಒಳ್ಳೆಯದಲ್ಲ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಂಗಳವಾರ ಹಲವು ಸ್ವಾಮೀಜಿಗಳು ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಈ ವೇಳೆ ಹೈಕಮಾಂಡ್ ತೆಗೆದುಕೊಂಡ ತೀರ್ಮಾನಕ್ಕೆ ಬದ್ಧ ಎಂದು ಯಡಿಯೂರಪ್ಪ ಅವರೇ ತಿಳಿಸಿದ್ದಾರೆ. ಹಾಗಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಯಾರೊಬ್ಬರೂ ಮಾತನಾಡದೆ ಬಾಯಿ ಮುಚ್ಚಿಕೊಂಡಿದ್ದರೆ ಎಲ್ಲವೂ ಸರಿಯಾಗುತ್ತದೆ. ಇದು ರಾಜ್ಯದ ಹಿತಕ್ಕೆ ಅನುಕೂಲವಾಗುತ್ತದೆ ಎಂದರು.

ಗೊಂದಲ ಮಾಡಬೇಡಿ: ಬಿಜೆಪಿಗೆ ಪೂರ್ಣ ಬಹುಮತ ಬಂದಿದ್ದರೆ ಇಷ್ಟೊಂದು ಸಮಸ್ಯೆ ಉದ್ಭವವಾಗುತ್ತಿರಲಿಲ್ಲ. ಈ ಹಿಂದೆ ಬಹುಮತವಿಲ್ಲದ ಕಾರಣ ಜೆಡಿಎಸ್ ಜತೆ ಹೋಗಿದ್ದೆವು. ಈಗ ಜೆಡಿಎಸ್, ಕಾಂಗ್ರೆಸ್ ಶಾಸಕರು ನಮ್ಮ ಪಕ್ಷಕ್ಕೆ ಬಂದ ನಂತರ ಸರ್ಕಾರ ರಚನೆ ಮಾಡಿದ್ದೇವೆ. ಮುಂದೆ ಪೂರ್ಣ ಬಹುಮತ ಪಡೆಯುವ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದು ಸಲಹೆ ನೀಡಿದರು.