ಉಡುಪಿ: ಶಿಕ್ಷಣ ಸಂಸ್ಥೆಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ತರಗತಿ ಶಿಕ್ಷಣದ ಜೊತೆಗೆ ಸ್ಪರ್ಧಾ ಪರೀಕ್ಷೆ ಬರೆಯಲು ತರಬೇತಿ ಮತ್ತು ತಾಂತ್ರಿಕ ಕೋರ್ಸುಗಳ ಬಗ್ಗೆ ಮಾಹಿತಿ ನೀಡಬೇಕು. ಯುವಕರು ಸ್ವಂತ ಉದ್ಯೋಗ ಆರಂಭಿಸುವಂತೆ ಪ್ರೋತ್ಸಾಹಿಸಬೇಕೆಂದು ಉದ್ಯಮಿ ಡಾ. ಎಚ್. ಎಸ್. ಶೆಟ್ಟಿ ಹೇಳಿದರು.
ಶುಕ್ರವಾರ ಶಿರ್ವದ ವಿದ್ಯಾವರ್ಧಕ ಸಮೂಹ ಸಂಸ್ಥೆಗಳ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ವಿದ್ಯಾವರ್ಧಕ ಸಮೂಹ ಸಂಸ್ಥೆಗಳಲ್ಲಿ ಶಿಕ್ಷಣದ ಗುಣಮಟ್ಟ ಮತ್ತು ಸೌಲಭ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇವುಗಳನ್ನು ಉನ್ನತಿಕರಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಸಂಘದ ಕಾರ್ಯದರ್ಶಿ ವಿ. ಸುಬ್ಬಯ್ಯ ಹೆಗ್ಡೆೆ ಸನ್ಮಾನಿಸಿದರು. ಆಡಳಿತ ಮಂಡಳಿ ಸದಸ್ಯ ಮಟ್ಟಾರ್ ರತ್ನಾಕರ್ ಹೆಗ್ಡೆ ಅಭಿನಂದನಾ ಮಾತುಗಳನ್ನಾಡಿದರು. ಉಡುಪಿ ಮಾಜಿ ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು. ವಿದ್ಯಾವರ್ಧಕ ಸಂಘದ ಆಡಳಿತಾಧಿಕಾರಿ ಪ್ರೊ. ವೈ. ಭಾಸ್ಕರ ಶೆಟ್ಟಿ ಸ್ವಾಗತಿಸಿದರು. ಸದಸ್ಯ ಜಗದೀಶ್ ಅರಸ ವಂದಿಸಿದರು.