ಶಿಕಾರಿಪುರ ಪುರಸಭೆಯಲ್ಲಿ ಆಯೋಜಿಸಿದ್ದ ಘನತ್ಯಾಜ್ಯ ಕಾರ್ಯಾಗಾರದಲ್ಲಿ ಮುಖ್ಯಾಧಿಕಾರಿ ಭರತ್, ವ್ಯವಸ್ಥಾಪಕ ರಾಜ್‌ಕುಮಾರ್, ಸುರೇಶ್, ಸ್ವಸಹಾಯ ಸಂಘಗಳ ಸದಸ್ಯರು ಮತ್ತಿತರರಿದ್ದರು.
ಶಿಕಾರಿಪುರ: ಮನೆಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಮೂಲದಲ್ಲೇ ಹಸಿ ಕಸ, ಒಣ ಕಸ, ಸ್ಯಾನಿಟರಿ ತ್ಯಾಜ್ಯ ಮತ್ತು ವಿಶೇಷ ಕಾಳಜಿ ತ್ಯಾಜ್ಯವಾಗಿ ವಿಂಗಡಿಸುವುದು ಕಡ್ಡಾಯ ಎಂದು ಪುರಸಭೆ ಮುಖ್ಯಾಧಿಕಾರಿ ಭರತ್ ಹೇಳಿದರು.
ಪುರಸಭೆಯಲ್ಲಿ ಅಧಿಕಾರಿಗಳು ಮತ್ತು ಸ್ವಸಹಾಯ ಸಂಘಗಳ ಸದಸ್ಯರಿಗೆ ಆಯೋಜಿಸಿದ್ದ ಸ್ವಚ್ಛ ಭಾರತ್ ಮಿಷನ್, ಘನ ತ್ಯಾಜ್ಯ ನಿರ್ವಹಣೆ ನಿಯಮಗಳು 2026ರ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ಪರಿಸರಸ್ನೇಹಿ ಜೀವನಶೈಲಿ ಅಳವಡಿಸಿಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು ಎಂದು ತಿಳಿಸಿದರು.
ತ್ಯಾಜ್ಯ ನಿರ್ವಹಣೆಯಲ್ಲಿ ಮಹಿಳೆಯರು, ಸ್ವಸಹಾಯ ಸಂಘಗಳ ಪಾತ್ರ ಮಹತ್ವದ್ದಾಗಿದ್ದು, ಸ್ವಚ್ಛ ಮತ್ತು ಸುಂದರ ನಗರ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು. ಹೊಸ ನಿಯಮಗಳ ಪ್ರಕಾರ ಸಾರ್ವಜನಿಕರು ಮನೆಯಲ್ಲಿ ಉತ್ಪತ್ತಿಯಾಗುವ ಕಸವನ್ನು ಬೇರ್ಪಡಿಸಬೇಕು. ಹಸಿ ಕಸ, ಒಣ ಕಸ, ಸ್ಯಾನಿಟರಿ ತ್ಯಾಜ್ಯ ಹಾಗೂ ವಿಶೇಷ ತ್ಯಾಜ್ಯಗಳನ್ನು ಬೇರ್ಪಡಿಸಿ ಪುರಸಭೆ ವಾಹನಗಳಿಗೆ ನೀಡಬೇಕು ಎಂದರು.
ಕಚೇರಿ ವ್ಯವಸ್ಥಾಪಕ ರಾಜ್‌ಕುಮಾರ್, ಸಮುದಾಯ ಸಂಘಟನಾಧಿಕಾರಿ ಸುರೇಶ್, ಹಿರಿಯ ಆರೋಗ್ಯ ನಿರೀಕ್ಷಕ ಸೈಯದ್ ನವಾಜ್, ಕಿರಿಯ ಆರೋಗ್ಯ ನಿರೀಕ್ಷಕ ನಾಗಭೂಷಣ್, ಪುರಸಭೆ ಸಿಬ್ಬಂದಿ, ಸಮುದಾಯ ಸಂಪನ್ಮೂಲ ಸಿಬ್ಬಂದಿ, ಸ್ವಸಹಾಯ ಸಂಘಗಳ ಸದಸ್ಯರು ಉಪಸ್ಥಿತರಿದ್ದರು.