ಶಿವಮೊಗ್ಗ: ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದ್ದು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದ್ದಾರೆ. ಅವರ ನಡೆ ಮತ್ತು ನುಡಿಯಲ್ಲಿ ಅಜಗಜಾಂತರ ವ್ಯತ್ಯಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದರು.
ಹಿರಿಯೂರಿಗೆ 2,500 ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದ್ದು, ಆದರೆ ಆ ಮೊತ್ತವನ್ನು ಎಲ್ಲಿಂದ ಹೊಂದಿಸುತ್ತಾರೆ ಎಂಬುದೇ ಪ್ರಶ್ನೆ. 2,500 ಕೋಟಿ ರೂ. ಪ್ಯಾಕೇಜ್ಗೆ ಆರ್ಥಿಕ ಇಲಾಖೆ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಕಾಲದಲ್ಲಿ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಏಳು ದಿನದಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಗೌರವಧನ ಹೆಚ್ಚಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಮತ್ತೊಂದೆಡೆ ಆರ್ಥಿಕ ಪರಿಸ್ಥಿತಿ ಬಗ್ಗೆ ಪಾಠ ಹೇಳಲಾಗುತ್ತಿದೆ. ಕ್ಷೇತ್ರಗಳಲ್ಲಿ ಭಾರತ್ ಜೋಡೋ ಸಂಘಗಳ ಅಧ್ಯಕ್ಷರನ್ನು ನೇಮಕ ಮಾಡಿ ವೇತನ ನೀಡುತ್ತಿರುವುದು ಸರಿಯಲ್ಲ. ತೆರಿಗೆದಾರರ ಹಣ ಹಾಗೂ ಎಸ್ಸಿಪಿ, ಟಿಎಸ್ಪಿ ಅನುದಾನ ದುರುಪಯೋಗವಾಗುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಇದ್ದರೂ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ರೈತರಿಗೆ ನೆರವಾಗುವ ಬದಲು ನಿಗಮ, ಮಂಡಳಿಗಳಿಗೆ ಅಧ್ಯಕ್ಷರ ನೇಮಕಕ್ಕೆ ಆದ್ಯತೆ ನೀಡಲಾಗಿದೆ. ಬರ ಪರಿಹಾರ ಮೊತ್ತದ ಬಗ್ಗೆಯೇ ಸರ್ಕಾರದಲ್ಲಿ ಗೊಂದಲವಿದೆ. ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಬಿಜೆಪಿ ಸಜ್ಜಾಗಿದೆ. ರೈತರ ಸಮಸ್ಯೆ, ಆಶಾ ಕಾರ್ಯಕರ್ತೆಯರ ಬೇಡಿಕೆ ಸೇರಿ ಜನಸಾಮಾನ್ಯರ ಸಮಸ್ಯೆಗಳ ಕುರಿತು ಎಲ್ಲ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತೇವೆ ಎಂದರು.