ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ
- ದೆಹಲಿಗೆ ತೆರಳಿ ಸಚಿವ ಸ್ಥಾನಕ್ಕಾಗಿ ಲಾಬಿ
- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕೆ
ಶಿವಮೊಗ್ಗ: ಉಪಚುನಾವಣೆ ಸಂದರ್ಭದಲ್ಲಿ ಸಿಎಂ (cm) ಸಿದ್ದರಾಮಯ್ಯ ಬಾಗಲಕೋಟೆ (bagalkote) ಹಾಗೂ ದಾವಣಗೆರೆಯಲ್ಲಿ ಬೀಡುಬಿಟ್ಟಿದ್ದರು. ಈಗ ಕಾಂಗ್ರೆಸ್‌ನ 30 ಶಾಸಕರು ದೆಹಲಿಗೆ ತೆರಳಿ ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುತ್ತಿದ್ದಾರೆ. ಆಡಳಿತ (adminstartion) ಹಳಿ ತಪ್ಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಬಣ ಬಡಿದಾಟದಿಂದ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಬೆಂಗಳೂರು ಸಂಪೂರ್ಣವಾಗಿ ಭಣಗುಡುತ್ತಿದೆ. ರಾಜ್ಯ ಸರ್ಕಾರಕ್ಕೆ ಮಾನ, ಮರ್ಯಾದೆಯ ಅರ್ಥವೇ ಗೊತ್ತಿಲ್ಲ. ಸಿಎಂ, ಡಿಸಿಎಂ ಕುರ್ಚಿ ಬಡಿದಾಟದಲ್ಲಿ ಜನರು ಸಂಕಷ್ಟ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರು ಏನೇ ಪುಂಗಿ ಊದಿದರೂ ದಾವಣಗೆರೆ ಹಾಗೂ ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿಯೇ ಗೆಲ್ಲಲಿದೆ. ಕಾಂಗ್ರೆಸ್ ಗೆಲ್ಲಲು ಸಾಧ್ಯವೇ ಇಲ್ಲ. ಕಾಂಗ್ರೆಸ್ ವಿರುದ್ಧ ಜನ ಬೇಸತ್ತಿದ್ದಾರೆ. ಆಡಳಿತ ಯಂತ್ರ ಕುಸಿದಿದೆ. ಅಭಿವೃದ್ಧಿ ಇಲ್ಲದಂತಾಗಿದೆ. ಕಾಂಗ್ರೆಸ್ ಸರ್ಕಾರ ಎಂದರೆ ಅಲ್ಪಸಂಖ್ಯಾತರ ಓಲೈಕೆ ಮಾಡು, ಹಿಂದುಗಳಿಗೆ ಅಪಮಾನ ಮಾಡುವ ಸರ್ಕಾರ ಎಂಬಂತಾಗಿದೆ ಎಂದು ಟೀಕಿಸಿದರು.
ಬಹಿರಂಗ ಚರ್ಚೆಗೆ ಬರಲಿ
ಬಿ.ಎಸ್.ಯಡಿಯೂರಪ್ಪ ಸಿಎಂ ಆಗಿದ್ದಾಗ ಏನೇನು ಅಭಿವೃದ್ಧಿ ಕಾರ್ಯಗಳು ನಡೆದಿದ್ದವು. ಸಿದ್ದರಾಮಯ್ಯ ಸಿಎಂ ಆದ ಬಳಿಕ ಕಡೇ ಪಕ್ಷ ಮೈಸೂರು ಜಿಲ್ಲೆಯಲ್ಲಿ ಏನೇನು ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂಬ ಬಗ್ಗೆ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ ಎಂದು ವಿಜಯೇಂದ್ರ ಸವಾಲು ಹಾಕಿದರು.
ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬರುತ್ತದೆ ಎಂಬ ಜೆಡಿಎಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ನಮ್ಮದು ರಾಷ್ಟ್ರೀಯ ಪಕ್ಷ, ನಾಯಕರು ಏನು ಹೇಳುತ್ತಾರೆಯೋ ಅದರಂತೆ ಒಂದಾಗಿ ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡುತ್ತೇವೆ. ರಾಷ್ಟ್ರೀಯ ನಾಯಕರು ಯಾವ ನಿರ್ದೇಶನ ನೀಡುತ್ತಾರೋ ಅದನ್ನು ಪಾಲಿಸುತ್ತೇವೆ ಎಂದರು.
ಮಹಿಳಾ ಮೀಸಲಾತಿಯಿಂದ ಸಬಲೀಕರಣ
ಪ್ರಧಾನಿ ನರೇಂದ್ರ ಮೋದಿ ಇಚ್ಛಾಶಕ್ತಿಯಿಂದ ಮಹಿಳಾ ಮೀಸಲಾತಿ ಜಾರಿಗೊಳಿಸಲು ಮುಂದಾಗಿದ್ದಾರೆ. ಮಹಿಳೆಯರಿಗೆ ಶೇ.33 ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಭಾರತ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಬರಲು, ಭಾರತ 2047ರಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕಾದರೆ ಮಹಿಳೆಯರ ಪಾತ್ರ ಮುಖ್ಯ ಎಂಬುದನ್ನು ಮೋದಿ ಮನಗಂಡಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಮಹಿಳೆಯರಿಗೆ ರಾಜಕೀಯ ಶಕ್ತಿ ನೀಡುವ ನಿರ್ಧಾರವನ್ನು ಪ್ರಧಾನಿ ಮಾಡಿದ್ದಾರೆ. ಆದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಇದನ್ನು ರಾಜಕೀಯ ಗಿಮಿಕ್ ಎನ್ನುವ ಮೂಲಕ ತಾಯಂದಿರಿಗೆ ಅಪಚಾರ ಎಸಗಿದ್ದಾರೆ ಎಂದು ದೂರಿದರು.
50 ವರ್ಷಕ್ಕೂ ಅಧಿಕ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ದೇಶದ ನಾರಿಶಕ್ತಿ ಬಗ್ಗೆ ಯೋಚನೆ ಮಾಡಿರಲಿಲ್ಲ. ಹೀಗಾಗಿ ಮಹಿಳಾ ಮೀಸಲಾತಿ ಬಗ್ಗೆ ಮಾತನಾಡುವ ಯೋಗ್ಯತೆ ಕಾಂಗ್ರೆಸ್‌ಗಿಲ್ಲ. ಈಗ ನರೇಂದ್ರ ಮೋದಿ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ಆದರೆ ಕಾಂಗ್ರೆಸ್‌ನವರು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.