ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬದವರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಎಸಿ ವೀರೇಶ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಎಲ್.ಚಂದ್ರಪ್ಪ, ಎನ್.ಲಲಿತಮ್ಮ, ನಾರಾಯಣ, ಮಂಜಪ್ಪ ಇತರರಿದ್ದರು. 
ಶಿವಮೊಗ್ಗ

ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಿ | Dss Protest

ಶಿವಕುಮಾರ ಎಸ್.ಪಿ.
ಸಾಗರ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಾವಿಗೆ ಸೂಕ್ತ ನ್ಯಾಯ ಒದಗಿಸುವಂತೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಸಾಗರ ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಕೈಗೊಂಡ ಸೋನಂ ವಾಂಗ್ಚುಕ್ ಮತ್ತು ಸಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾಗ ಅವರನ್ನು ಬಂಧಿಸಿರುವ ಕ್ರಮ ಖಂಡನೀಯ ಎಂದರು.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಅಸ್ಪತ್ರೆಯಲ್ಲಿ ಬಲವಂತವಾಗಿ ಬಂಧನದಲ್ಲಿರಿಸಿರುವ ಸೋನಂ ವಾಂಗ್ಚುಕ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಉತ್ತಮ ಚಿಕಿತ್ಸೆ ಕೊಡಿಸಬೇಕು. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು. ಪ್ರಜಾಪ್ರಭುತ್ವದಲ್ಲಿ ಕಾನೂನಾತ್ಮಕವಾಗಿ ಹೋರಾಟ ಮಾಡುತ್ತಿರುವುದನ್ನು ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರಕ್ಕೆ ಸೂಕ್ತ ತಿಳಿವಳಿಕೆ ನೀಡಬೇಕು ಎಂದು ಒತ್ತಾಯಿಸಿದರು.
ಸಮಿತಿ ಸಂಚಾಲಕ ನಾಗರಾಜ್, ಪ್ರಮುಖರಾದ ಎಲ್.ಚಂದ್ರಪ್ಪ, ಎನ್.ಲಲಿತಮ್ಮ, ನಾರಾಯಣ, ಮಂಜಪ್ಪ, ಸುಶೀಲಮ್ಮ, ಮೋಹಿನಿ, ರಾಮಪ್ಪ, ವೀರೇಶ್, ದೇವರಾಜ್, ರಾಧಿಕಾ, ರಾಘವೇಂದ್ರ, ಶಿವಪ್ಪ, ನಾರಾಯಣ ಮಂಡಗಳಲೆ ಇತರರಿದ್ದರು.