ಶಿವಮೊಗ್ಗ: ಕಳೆದ ಸಾಲಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವಿಮಾ ಪರಿಹಾರ ಮೊತ್ತದ ನಿರ್ಧರಿಸುವಲ್ಲಿ ಹಾಗೂ ಪಾವತಿಸುವಲ್ಲಿ ಸಾಕಷ್ಟು ವ್ಯತ್ಯಾಸ ಕಂಡುಬಂದಿರುವ ಹಿನ್ನೆಲೆಯಲ್ಲಿ ಈ ಪ್ರಕ್ರಿಯೆಯ ಸಮಗ್ರ ಮರು ಪರಿಶೀಲನೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಬೆಳೆ ವಿಮೆಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ವಿಮಾ ಪರಿಹಾರ ನಿರ್ಧರಿಸುವಲ್ಲಿ ಹಾಗೂ ಪಾವತಿಗೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡಿರುವ ಎಲ್ಲ ಕ್ರಮಗಳನ್ನು ಕೂಲಂಕಷವಾಗಿ ಪರಿಶೀಲಿಸಿದರು.
ಹೊಸನಗರ ಮತ್ತು ತೀರ್ಥಹಳ್ಳಿ ಭಾಗದ ರೈತರ ನಿಯೋಗ ಭಾಗವಹಿಸಿ ಬೆಳೆ ವಿಮೆ ಪರಿಹಾರ ನಿರ್ಧರಣೆ ಮತ್ತು ಪಾವತಿಯಲ್ಲಿ ತಮಗಾಗಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದಿತು. ರೈತರ ಅಹವಾಲುಗಳನ್ನು ಆಲಿಸಿದ ಸಚಿವರು, ಸರ್ಕಾರದ ನಿರ್ಧಾರಗಳು ಸದಾ ರೈತಪರವಾಗಿರಬೇಕು. ಕೃಷಿ, ತೋಟಗಾರಿಕೆ ಹಾಗೂ ಹವಾಮಾನ ಇಲಾಖೆಯ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಬಾರದೆಂದು ಸೂಚನೆ ನೀಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಕಾಶ್ ನಿಟ್ಟಳಿ ಅವರು ಆನ್ಲೈನ್ ಮೂಲಕ ಸಭೆಯಲ್ಲಿ ಭಾಗವಹಿಸಿದ್ದರು. ವಿಪತ್ತು ನಿರ್ವಹಣಾ ಕಾರ್ಯದರ್ಶಿ ಮನೋಜ್ಕುಮಾರ್ ಮೀನಾ, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಜಿ.ಸಿ.ಪೂರ್ಣಿಮಾ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎ.ಬಿ.ಸಂಜಯ್ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.