ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
- ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್.ಎಸ್.ಪರಮೇಶ್ವರಪ್ಪ
- ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಲು ಫಲಾನುಭವಿಯಿಂದ ಲಂಚ ಬೇಡಿಕೆ
- 10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರಿಂದ ವ್ಯವಸ್ಥಾಪಕ ಟ್ರ್ಯಾಪ್
ಶಿವಮೊಗ್ಗ: ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆ ಬಾವಿ(Borewell) ಕೊರೆಸಲು ಫಲಾನುಭವಿಯಿಂದ 10 ಸಾವಿರ ರೂ. ಲಂಚ(Bribe) ಪಡೆಯುವಾಗ ಸಿಕ್ಕಿಬಿದ್ದಿದ್ದ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಆರ್.ಎಸ್.ಪರಮೇಶ್ವರಪ್ಪ ಅವರಿಗೆ ಬುಧವಾರ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 40 ಸಾವಿರ ರೂ. ದಂಡ ವಿಧಿಸಿದೆ.
2015-16ನೇ ಸಾಲಿನಲ್ಲಿ ಸಾಗರ ತಾಲೂಕಿನ ಹೊಸಗುಂದ ಗ್ರಾಮದ ಎಚ್.ಎಸ್.ಜನಾರ್ಧನ್ ಅವರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆ(Ganga Welfare Scheme)ಯಡಿ ಕೊಳವೆ ಬಾವಿ ಕೊರೆಸಲು ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಅರ್ಜಿ ಸಲ್ಲಿಸಿ ಫಲಾನುಭವಿಯಾಗಿ ಆಯ್ಕೆಯಾಗಿದ್ದರು.
ಕೊಳವೆ ಬಾವಿ ಕೊರೆಸಲು ಅಂದಿನ ಜಿಲ್ಲಾ ವ್ಯವಸ್ಥಾಪಕರಾಗಿದ್ದ ಆರ್.ಎಸ್.ಪರಮೇಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 2017ರ ಜು.13ರಂದು ಜನಾರ್ಧನ ಅವರಿಂದ 10 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಟ್ರ್ಯಾಪ್(Lokayukta Trap) ಮಾಡಿ ಪರಮೇಶ್ವರಪ್ಪ ಅವರನ್ನು ಬಂಧಿಸಿದ್ದರು.
ಪ್ರಕರಣದ ತನಿಖಾಧಿಕಾರಿಯಾಗಿದ್ದ ಡಿವೈಎಸ್‌ಪಿ ಎ.ಚಂದ್ರಪ್ಪ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ(Indictment List) ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾಗಿದ್ದರಿಂದ ಆರ್.ಎಸ್.ಪರಮೇಶ್ವರಪ್ಪ ಅವರಿಗೆ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ನೀಡಿದೆ. ವಿಶೇಷ ಸಾರ್ವಜನಿಕ ಅಭಿಯೋಜಕ ಎಂ.ಡಿ.ಸುಂದರರಾಜ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.