ಶಿಕಾರಿಪುರ: ಪಟ್ಟಣದಲ್ಲಿ ಸ್ವಚ್ಛತೆ ಕಾಪಾಡುವುದು ನಮ್ಮ ಮೊದಲ ಆದ್ಯತೆ ಆಗಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಆಯೋಜಿಸಿರುವ ಸೇವಾ ಸಂಕಲ್ಪ ಅಭಿಯಾನ, ಮಹಾತ್ಮ ಗಾಂಧೀಜಿ, ಮಾಜಿ ಪ್ರಧಾನಿ ಲಾಲ್ ಬಹದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಸಂದರ್ಭದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಮಾತನಾಡಿ, ಸ್ವಚ್ಛ ಪರಿಸರ ನಮ್ಮ ಸಂಕಲ್ಪ ಆಗಬೇಕು ಎಂದು ತಿಳಿಸಿದರು.
ಪ್ರತಿ ನಿತ್ಯ ಸಾರ್ವಜನಿಕರ ಆರೋಗ್ಯ ಮತ್ತು ಸ್ವಚ್ಛ ಪರಿಸರಕ್ಕಾಗಿ ಪೌರ ಕಾರ್ಮಿಕರು ಶ್ರಮಿಸುತ್ತಿದ್ದಾರೆ. ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಪಾರ. ಸಾರ್ವಜನಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ನಿಗದಿತ ಸ್ಥಳಗಳಲ್ಲಿ ವಿಲೇವಾರಿ ಮಾಡಬೇಕು. ಸ್ವಚ್ಛತೆ ಎಂಬುದು ಕೇವಲ ಪೌರ ಕಾರ್ಮಿಕರ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಮನೆ, ರಸ್ತೆ, ಸಾರ್ವಜನಿಕ ಸ್ಥಳ ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶಾದ್ಯಂತ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿದ್ದು, ಸ್ವಚ್ಛ ಭಾರತ ಅಭಿಯಾನ ಜನಾಂದೋಲನವಾಗಿ ರೂಪುಗೊಂಡಿದೆ. ಸ್ವಚ್ಛತೆ, ಶೌಚಗೃಹ ನಿರ್ಮಾಣ, ತ್ಯಾಜ್ಯ ನಿರ್ವಹಣೆ ಹಾಗೂ ಸ್ವಚ್ಛ ಪರಿಸರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅನೇಕ ಕಾರ್ಯಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸ್ಥಳೀಯ ಜನಪ್ರತಿನಿಧಿಗಳು, ಬಿಜೆಪಿ ಮುಖಂಡರು, ಪೌರ ಕಾರ್ಮಿಕರು, ಕಾರ್ಯಕರ್ತರು ಇದ್ದರು.