ಶಿವಮೊಗ್ಗ: ಮಳೆ ಕೊರತೆಯಿಂದ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಯಾವುದೇ ಗ್ರಾಮ ಅಥವಾ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ತೊಂದರೆಯಾಗದಂತೆ ಕ್ರಿಯಾಯೋಜನೆ ಸಿದ್ಧಪಡಿಸಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಾಶ್ ನಿಟ್ಟಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬರ ನಿರ್ವಹಣೆ ಕುರಿತು ಗುರುವಾರ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಮುಂಚಿತವಾಗಿಯೇ ಗುರುತಿಸಿ, ಅಲ್ಲಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಅಥವಾ ತುರ್ತು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸನ್ನದ್ಧರಾಗಿರುವಂತೆ ತಹಸೀಲ್ದಾರ್ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಜೂನ್ವರೆಗೂ ಬರ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇರುವುದರಿಂದ ನೀರಿನ ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಲು ಕ್ರಿಯಾ ಯೋಜನೆ ಸಿದ್ಧಪಡಿಸಬೇಕು. ಜಿಲ್ಲೆಯ 17 ಗ್ರಾಪಂಗಳ ವ್ಯಾಪ್ತಿಯ 20 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ಪ್ರಸ್ತುತ ಖಾಸಗಿ ಬೋರ್ವೆಲ್ಗಳ ಮೂಲಕ ನೀರು ಪೂರೈಸಲಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ 5ರಿಂದ 6 ಗ್ರಾಪಂಗಳಲ್ಲಿ ಸಮಸ್ಯೆ ಕಂಡುಬಂದಿದ್ದು, ಸಮಸ್ಯೆ ಇರುವ ಗ್ರಾಪಂಗಳ ಸಂಪೂರ್ಣ ವಿವರ ಪಡೆಯಲು ಸೂಚಿಸಿದರು. ಖಾಸಗಿ ಬೋರ್ವೆಲ್ಗಳನ್ನು ಅತ್ಯಂತ ಎಚ್ಚರಿಕೆಯಿಂದ ಪರಿಶೀಲಿಸಿ ಬಾಡಿಗೆಗೆ ಪಡೆಯಬೇಕು ಎಂದು ಎಚ್ಚರಿಕೆ ನೀಡಿದರು.
ಬರ ನಿರ್ವಹಣೆ ಕಾಮಗಾರಿಗಳಡಿ ಬೋರ್ವೆಲ್ ಪುನಶ್ಚೇತನ ಹಾಗೂ ರೀಚಾರ್ಜ್ ಪಿಟ್ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೆತ್ತಿಕೊಳ್ಳಬೇಕು ಎಂದು ಸೂಚಿಸಿದ ಅವರು, ಗ್ರಾಮ ಪಂಚಾಯಿತಿಗಳಲ್ಲಿರುವ ಟೆಲಿಮೆಟ್ರಿಕ್ ಮಳೆ ಮಾಪಕಗಳು (ಟಿಆರ್ಜಿ) ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ನಿರಂತರವಾಗಿ ಪರಿಶೀಲಿಸಿ ಮಾಹಿತಿ ನೀಡಬೇಕು. ಇದಕ್ಕಾಗಿ ವಿಎಒಗಳನ್ನು ನೋಡಲ್ ಆಫೀಸರ್ಗಳನ್ನಾಗಿ ನೇಮಿಸಿದ್ದು ಒಂದು ತಿಂಗಳೊಳಗೆ ವರದಿ ಪಡೆಯಬೇಕು ಎಂದರು.
ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಸಾಗರ ಉಪವಿಭಾಗಾಧಿಕಾರಿ ಸತ್ಯನಾರಾಯಣ್, ಜಿಪಂ ಉಪಕಾರ್ಯದರ್ಶಿ ಅನ್ನಪೂರ್ಣಾ, ಕೃಷಿ ಜಂಟಿ ನಿರ್ದೇಶಕಿ ಪೂರ್ಣಿಮಾ ಸೇರಿ ಜಿಲ್ಲಾ ಹಾಗೂ ತಾಲೂಕುಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.