ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾಧಿಕಾರಿ
- 19,009ವಿದ್ಯಾರ್ಥಿಗಳ ನೋಂದಣಿ
- 41 ಕೇಂದ್ರಗಳಲ್ಲಿ ನಡೆಯಲಿದೆ ಎಕ್ಸಾಂ
ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಗಳು (exams) ಫೆ.28ರಿಂದ ಮಾ.17ರವರೆಗೆ ನಡೆಯಲಿದ್ದು, ಜಿಲ್ಲೆಯಲ್ಲಿ 41 ಪರೀಕ್ಷಾ ಕೇಂದ್ರ (center) ಗಳನ್ನು ಗುರುತಿಸಲಾಗಿದೆ. 7,188 ಬಾಲಕರು ಹಾಗೂ 10,567 ವಿದ್ಯಾರ್ಥಿನಿಯರು ಸೇರಿ ಒಟ್ಟು 19,009ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ (enroll) ಮಾಡಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಹಾಗೂ ಪರೀಕ್ಷೆ ದಿನಗಳಂದು ಕೇಂದ್ರಗಳಿಗೆ ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳುವಂತೆ ಮೆಸ್ಕಾಂ ಅಧೀಕ್ಷಕ ಅಭಿಯಂತರಿಗೆ ಸೂಚಿಸಲಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ತಲಾ ಮೂವರು ಅಧಿಕಾರಿಗಳ 12 ತಂಡಗಳನ್ನು ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ಕೊಂಡೊಯ್ಯುವ ವಾಹನಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗುವುದು. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗುವುದು ಎಂದರು.
ಗ್ರಾಮೀಣ ಭಾಗದ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ತೆರಳಲು ಅನುಕೂಲವಾಗುವಂತೆ ಉಚಿತವಾಗಿ ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯ ಒದಗಿಸಲಾಗುವುದು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಪ್ರವೇಶಪತ್ರವನ್ನು ತೋರಿಸಿ ಪ್ರಯಾಣಿಸಬಹುದು ಎಂದು ಹೇಳಿದರು.
ಜಿಪಂ ಸಿಇಒ ಎನ್.ಹೇಮಂತ್, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ಸುದ್ದಿಗೋಷ್ಠಿಯಲ್ಲಿದ್ದರು.
ಪಾಲಕರ ಕೋರಿಕೆಯಂತೆ ತರಗತಿ
ಪಾಲಕರ ಕೋರಿಕೆ ಮೇರೆಗೆ ಪ್ರತಿದಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಂಜೆ ವಿಶೇಷ ಕಲಿಕಾ ತರಗತಿಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಜಿಲ್ಲೆಗೆ ಉತ್ತಮ ಫಲಿತಾಂಶ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸಿದ್ದಾರೆ. ಇದರಿಂದ ಜಿಲ್ಲೆಗೆ ಉತ್ತಮ ಫಲಿತಾಂಶ ಬರುವ ನಿರೀಕ್ಷೆ ಇದೆ ಎಂದು ಎನ್.ಹೇಮಂತ್ ಹೇಳಿದರು. ವಿದ್ಯಾರ್ಥಿಯ ಕಲಿಕೆಗೆ ಹಿನ್ನೆಡೆಯಾಗಿರುವ ಸೂಕ್ಷ್ಮ ಕಾರಣಗಳನ್ನು ಗಮನಿಸಿ ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಉಪನ್ಯಾಸಕರು ತರಬೇತಿ ನೀಡುತ್ತಿದ್ದಾರೆ. ಮುಂದಿನ ಶೈಕ್ಷಣಿಕ ಸಾಲಿನ ಆರಂಭದಿಂದಲೇ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದರು. ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರು ಮೂರು ಪರೀಕ್ಷೆಗಳ ಮೌಲ್ಯಮಾಪನ ನಡೆಸಿ ಕಾಲೇಜಿನಲ್ಲಿ ಶೈಕ್ಷಣಿಕ ವರ್ಷದ ಬೋಧನೆಯನ್ನೂ ಮಾಡಬೇಕು. ಹೀಗಾಗಿ ಮಕ್ಕಳಿಗೆ ಸ್ವಲ್ಪ ಹೆಚ್ಚಿನ ಕಾಲಾವಧಿ ನೀಡಬೇಕಾಗುತ್ತದೆ. ವಿಶೇಷ ತರಗತಿ ನಡೆಸುವ ಅನಿವಾರ್ಯತೆಯೂ ಇರುತ್ತದೆ. ಬಹುತೇಕ ವಿಷಯಗಳಲ್ಲಿ ಹೆಚ್ಚಿನ ಅಂಕ ಪಡೆಯುವ ಕೆಲ ವಿದ್ಯಾರ್ಥಿಗಳು ಒಂದೆರೆಡು ವಿಷಯದಲ್ಲಿ ಅನುತ್ತೀರ್ಣರಾಗುತ್ತಾರೆ. ಇದರಿಂದ ಒಟ್ಟಾರೆ ಫಲಿತಾಂಶಕ್ಕೆ ಹಿನ್ನಡೆಯಾಗುತ್ತದೆ. ಹೀಗಾಗಿ ಹೆಚ್ಚು ನಿಗಾ ವಹಿಸಲಾಗುತ್ತಿದೆ ಎಂದು ಹೇಳಿದರು.