ಅಪ್ರಾಪ್ತರಿಂದ ಹತ್ಯೆಯಾದ ಸಂಕೇತ್ ಪಾಲಕರಿಗೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದರು. ಎಸ್.ಎನ್.ಚನ್ನಬಸಪ್ಪ, ಎನ್.ರಮೇಶ್, ಎಚ್.ಸಿ.ಯೋಗೇಶ್ ಇತರರಿದ್ದರು.
- ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರ ಸಂಪರ್ಕ
- ಇರಾನ್ ಮೇಲೆ ಅಮೆರಿಕ ಮಾಡಿರುವ ದಾಳಿ ಅನಗತ್ಯವಾದುದು
- ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯ(Ministry of External Affairs)ದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರ(Arab countries)ಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ ಕರೆತರಲಾಗುವುದು. ದುಬೈ(Dubai)ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದರು.
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ(Kannadigas) ಸುರಕ್ಷೆ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆತರಲಾಗುವುದು. ಎಂಎಲ್‌ಸಿ ಎಸ್.ಎಲ್.ಭೋಜೇಗೌಡ ಕೂಡ ದುಬೈನಲ್ಲಿದ್ದು, ದೂರವಾಣಿ ಮೂಲಕ ಮಾತನಾಡಿದ್ದೇನೆ. ಹೋಟೆಲ್‌ನಲ್ಲಿ ಸುರಕ್ಷಿತವಾಗಿದ್ದಾರೆ ಎಂದರು.
ಅಮೆರಿಕದ ತದ್ವಿರುದ್ಧ ನಿಲುವು: ಇರಾನ್(Iran) ಮೇಲೆ ಅಮೆರಿಕ(America) ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕ ತದ್ವಿರುದ್ಧ ನಿಲುವು ಹೊಂದಿರುವುದು ಖಂಡನೀಯ. ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.
ವಿದ್ಯುತ್ ದರ ಏರಿಕೆ ಇಲ್ಲ: ಏಪ್ರಿಲ್ನಲ್ಲಿ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಸದ್ಯಕ್ಕೆ ಸರ್ಕಾರದ ಮುಂದೆ ಅಂತಹ ಯಾವುದೇ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದರು.
15 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ
ಅಪ್ರಾಪ್ತರಿಂದ ಹತ್ಯೆಯಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ಪಾಲಕರಿಗೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಪರಿಹಾರದ ಚೆಕ್(Compensation check) ವಿತರಿಸಿದರು. ಸಂಕೇತ್ ಪಾಲಕರಿಗೆ ಸಾಂತ್ವನ ಹೇಳಿದ ಅವರು, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 10 ಲಕ್ಷ ರೂ., ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಶಾಸಕ ಎಸ್.ಎನ್.ಚನ್ನಬಸಪ್ಪ, ಎಂಎಲ್‌ಸಿ ಡಿ.ಎಸ್.ಅರುಣ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್.ಪ್ರಸನ್ನಕುಮಾರ್, ಮುಖಂಡರಾದ ಎನ್.ರಮೇಶ್, ಎಚ್.ಸಿ.ಯೋಗೇಶ್, ಎಸ್.ರವಿಕುಮಾರ್, ಎಸ್.ಕೆ.ಮರಿಯಪ್ಪ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಸ್‌ಪಿ ಬಿ.ನಿಖಿಲ್, ತಹಸೀಲ್ದಾರ್ ವಿ.ಎಸ್.ರಾಜೀವ್ ಮತ್ತಿತರರಿದ್ದರು.