ಸಾಗರ ನಗರಸಭೆಯಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಗೋಪಾಲಕೃಷ್ಣ ಬೇಳೂರು, ಡಿಸಿ ಪ್ರಭುಲಿಂಗ ಕವಳಿಕಟ್ಟಿ, ಎಸಿ ವೀರೇಶ್‌ಕುಮಾರ್ ಇತರರಿದ್ದರು.
ಸಾಗರ: ಜನರ ಸಮಸ್ಯೆಗಳಿಗೆ ಸ್ಪಂದಿಸುವುದಿಲ್ಲ. ಆದರೆ ಬ್ರೋಕರ್‌ಗಳ ಕೆಲಸ ಮಾತ್ರ ಆಗುತ್ತದೆ. ಅಂತಹ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸೂಚಿಸಿದರು.
ನಗರಸಭೆಯಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ನಗರಸಭೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಕೆಲವು ವಿಭಾಗಗಳ ಬಗ್ಗೆ ಸಾಕಷ್ಟು ದೂರುಗಳಿವೆ. ಇ-ಸ್ವತ್ತು ಕಾಲಮಿತಿಯಲ್ಲಿ ಮಾಡುತ್ತಿಲ್ಲ. ಬ್ರೋಕರ್ ಜತೆ ಬಂದರೆ ಕೆಲಸವಾಗುತ್ತದೆ ಎಂದು ಸಾರ್ವಜನಿಕರು ದೂರು ನೀಡುತ್ತಿದ್ದಾರೆ. ಜನರಿಗೆ ತೊಂದರೆ ಕೊಡುವ ಅಧಿಕಾರಿ, ಸಿಬ್ಬಂದಿ ನಮಗೆ ಬೇಡ. ಸರಿಯಾಗಿ ಕೆಲಸ ಮಾಡಬೇಕು ಇಲ್ಲವಾದರೆ ಇಲ್ಲಿಂದ ಹೊರಡಿ ಎಂದು ಎಚ್ಚರಿಸಿದರು.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಬೇಕು. ರಸ್ತೆಬದಿ ಗೂಡಂಗಡಿಗಳನ್ನು ತೆರವುಗೊಳಿಸಬೇಕು. ಸಂಚಾರ ಸಮಸ್ಯೆ ಸರಿಪಡಿಸಬೇಕು. ನಗರದ ಹಿತದೃಷ್ಟಿಯಿಂದ ಮಾರ್ಕೇಟ್ ರಸ್ತೆ ಅಗಲೀಕರಣ ತಕ್ಷಣ ಆಗಬೇಕು. ಭೂಸ್ವಾಧೀನ ಪ್ರಕ್ರಿಯೆ ಕೈಗೊಳ್ಳಬೇಕು. ಒಳಚರಂಡಿ ಕಾಮಗಾರಿ ತ್ವರಿತವಾಗಿ ಮುಗಿಸಬೇಕು ಎಂದು ಸೂಚಿಸಿದರು.
ಪೌರ ಕಾರ್ಮಿಕರ ಕೊರತೆಯಿಂದ ಸ್ವಚ್ಛತಾ ಕಾರ್ಯ ವಿಳಂಬವಾಗುತ್ತಿದೆ. ಹೆಚ್ಚುವರಿಯಾಗಿ 25 ಜನರ ನೇರ ನೇಮಕಾತಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಅನುಮತಿ ನೀಡಬೇಕು ಎಂದರು.
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾತನಾಡಿ, ಒಳಚರಂಡಿ ಕಾಮಗಾರಿ ಆದಷ್ಟು ಶೀಘ್ರವಾಗಿ ಮುಗಿಸಬೇಕು. ಕಾಯಂ ಪೌರ ಕಾರ್ಮಿಕರು ಕೊರತೆ ಇರುವ ಕಡೆ ನೇರ ನೇಮಕ ಆಧಾರದ ಮೇಲೆ ಕೆಲಸಕ್ಕೆ ತೆಗೆದುಕೊಳ್ಳಬಹುದು. ನಗರವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ತಿಳಿಸಿದರು.
ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್, ತಹಸೀಲ್ದಾರ್ ಪ್ರದೀಪ್, ಪೌರಾಯುಕ್ತ ಎಚ್.ಕೆ.ನಾಗಪ್ಪ, ಯೋಜನಾ ನಿರ್ದೇಶಕ ಕೆ.ರಂಗಸ್ವಾಮಿ ಇತರರಿದ್ದರು.