ಸಾಂದರ್ಭಿಕ ಚಿತ್ರ 
ಜಿಲ್ಲೆ

ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ: ಎಂ.ಬಿ.ಪಾಟೀಲ್

ಅವಿನಾಶ್ ಜೈನಹಳ್ಳಿ

ರಾಜ್ಯದಲ್ಲಿ ಸಿದ್ದರಾಮಯ್ಯ 5 ವರ್ಷ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸಿದ್ದರಾಮಯ್ಯ ಆಪ್ತರೂ ಆದ ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ನಂಜನಗೂಡು ತಾಲೂಕಿನ ಸುತ್ತೂರು ಶ್ರೀ ಮಠಕ್ಕೆ ಸೋಮವಾರ ಪತ್ನಿ ಸಮೇತ ಭೇಟಿ ನೀಡಿದ ಅವರು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಬಳಿಕ ಯಾವುದೇ ಬದಲಾವಣೆ ಇಲ್ಲ. ರಾಜ್ಯದ ಮುಖ್ಯಮಂತ್ರಿ ಬಗ್ಗೆ ಎಐಸಿಸಿ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದರು.

ಸಿದ್ದರಾಮಯ್ಯ ಅವರೇ ಮುಂದಿನ ಐದು ವರ್ಷವೂ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಸ್ಪಷ್ಟಪಡಿಸಿದ್ದಾರೆ ಎಂದರು.

ಬಿಜೆಪಿ ಅಧಿಕಾರವದಿಯಲ್ಲಿ ನಡೆದ ಎಲ್ಲ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಪಿಎಸ್‌ಐ ಹಗರಣ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇತರೆ ಇಲಾಖೆಗಳಲ್ಲಿ ನಡೆದಿರುವ ಹಗರಣಗಳ ಬಗ್ಗೆ ತನಿಖೆ ನಡೆಸುತ್ತೇವೆ. ಎಲ್ಲ ಹಗರಣಗಳನ್ನು ಲಾಜಿಕ್ ಎಂಡ್‌ಗೆ ತೆಗೆದುಕೊಂಡು ಹೋಗುತ್ತೇವೆ. ತಪ್ಪಿಸ್ತರಿಗೆ ಶಿಕ್ಷೆ ಕೊಡಿಸುತ್ತೇವೆ, ನೊಂದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುತ್ತೇವೆ ಎಂದರು.

ಗ್ಯಾರೆಂಟಿ ಕಾರ್ಡ್ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೊದಲ ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಗ್ಯಾರೆಂಟಿ ಕಾರ್ಡ್ ಬಗ್ಗೆ ಚರ್ಚೆ ನಡೆದಿದ್ದು, ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಈ ವಿಚಾರದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದರು.