ಬೆಳಗಾವಿ: ಕಳೆದ ಮೂರು ವರ್ಷಗಳಿಂದ ಬಿಲ್ ಕೊಡದಿದ್ದಾಗ ಸುಮ್ಮನಿದ್ದ ಗುತ್ತಿಗೆದಾರರು ಈಗ ಯಾಕೆ ಆರೋಪ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಅವರಿಗೆ ನೈತಿಕತೆ ಇದೆಯೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಈ ಕುರಿತು ಮಾತನಾಡಿದ ಸಿಎಂ ಒಳ್ಳೆಯ ಕೆಲಸ ಮಾಡಿದವರಿಗೆ ನಾವು ತೊಂದರೆ ಕೊಡುವುದಿಲ್ಲ. ಆದರೆ, ಕಳಪೆ ಕಾಮಗಾರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಗುತ್ತಿಗೆದಾರರ ಬಿಲ್ ಬಾಕಿ ಉಳಿದಿರುವುದು ಯಾರ ಸರ್ಕಾರದ ಅವಧಿಯದ್ದು. ಹಿಂದಿನ ಸರ್ಕಾರ ಗುತ್ತಿಗೆದಾರರ ಬಿಲ್ಗಳನ್ನು ಬಾಕಿ ಉಳಿಸಿಕೊಂಡಿದೆ. ಕಳೆದ ಎರಡ್ಮೂರು ವರ್ಷಗಳಿಂದ ಬಿಲ್ ಯಾಕೆ ಪಾವತಿಸಿಲ್ಲ. ಕಳೆದ ಮೂರು ವರ್ಷಗಳಿಂದ ಬಿಲ್ ಕೊಡದಿದ್ದಾಗ ಸುಮ್ಮನಿದ್ದ ಗುತ್ತಿಗೆದಾರರು ಈಗ ಯಾಕೆ ಆರೋಪ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದು ಇನ್ನೂ ಮೂರು ತಿಂಗಳೂ ಕೂಡ ಕಳೆದಿಲ್ಲ. ಶೇ. 40ರಷ್ಟು ಕಮಿಷನ್ ಬಗ್ಗೆ ನಾವೇ ಆರೋಪಿಸಿದ್ದೆವು. ಗುತ್ತಿಗೆದಾರರು ಕೈಗೊಂಡ ಕಾಮಗಾರಿಗಳ ಕುರಿತು ತನಿಖೆ ನಡೆಸುವಂತೆ ನಾಲ್ಕು ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಅಧಿಕಾರಿಗಳು ನೀಡಿದ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಟುಂಬಸ್ಥರು ಮರುತನಿಖೆ ಮಾಡಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯಲ್ಲಿ ಹೇಳಿದ್ದಾರೆ.