ವಿಜಯವಾಣಿ ಸುದ್ದಿಜಾಲ ಉಡುಪಿ
ಭಾರತೀಯ ಕಲಾಪ್ರಕಾರಗಳು ಕೇವಲ ಮನೋರಂಜನೆಗಷ್ಟೇ ಸೀಮಿತವಲ್ಲ. ಅವು ಭಗವಂತನೊಂದಿಗೆ ಅನುಸಂಧಾನ ಮಾಡುವ ಮಾಧ್ಯಮವೂ ಹೌದು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿಪ್ರಾಯಪಟ್ಟರು.
ಉಡುಪಿಯ ಯಕ್ಷಗಾನ ಕಲಾರಂಗ- ಇನ್ಫೋಸಿಸ್ ಫೌಂಡೇಶನ್ (ಐವೈಸಿ) ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಉಡುಪಿ ಸರಿಗಮ ಭಾರತಿ ಸಂಗೀತ ವಿದ್ಯಾಲಯದ ರಜತ ಸಂಭ್ರಮ ಉದ್ಘಾಟಿಸಿ ಮಾತನಾಡಿದರು.
ಭಾರತದ ತಾಯಿ ಬೇರು ನಮ್ಮ ಕಲೆ, ಸಂಸ್ಕೃತಿಯ ಪರಂಪರೆಯಲ್ಲಿ ಭದ್ರವಾಗಿ ಅಡಗಿದೆ. ಅದನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸ ಇಂತಹ ಸಂಸ್ಥೆಗಳಿಂದ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಬದಲಾವಣೆ ಬೇಕು ಎಂಬ ಪ್ರಜ್ಞೆ ಸಮಾಜದಲ್ಲಿ ಮೂಡುತ್ತಿರುವುದು ಸಂತಸದ ವಿಷಯ ಎಂದರು.
ಉಡುಪಿಯ ಸಾಂಸ್ಕೃತಿಕ ಸಂಸ್ಥೆಗಳ ಖಜಾಂಜಿಯಾಗಿ ಸೇವೆ ಸಲ್ಲಿಸುತ್ತಿರುವ ಪ್ರೊ. ಕೆ.ಸದಾಶಿವ ರಾವ್ ಅವರಿಗೆ ರಜತ ಸನ್ಮಾನ ನೀಡಿ ಗೌರವಿಸಲಾಯಿತು. ಪತ್ನಿ ಮಮತಾ ರಾವ್ ಉಪಸ್ಥಿತರಿದ್ದರು. ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಅಭಿನಂದಿಸಿದರು. ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ.ಗಂಗಾಧರ ರಾವ್ ಉಪಸ್ಥಿತರಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಕೆ.ಎಸ್. ವಿಷ್ಣುದೇವ್ ಅವರಿಂದ ರಾಗಂ..ತಾನಂ.. ಪಲ್ಲವಿ ಸಹಿತ ಕರ್ನಾಟಕ ಸಂಗೀತ ಕಛೇರಿ ನಡೆಯಿತು. ವಯೊಲಿನ್ನಲ್ಲಿ ವಿ.ಎಸ್. ಗೋಕುಲ್ ಆಲಂಗೋಡೆ, ಮೃದಂಗದಲ್ಲಿ ಸುನಾದ ಕೃಷ್ಣ ಅಮೈ ಹಾಗೂ ಘಟಂನಲ್ಲಿ ಶ್ರೀಜಿತ್ ವೆಲ್ಲತ್ತಂಜೂರ್ ಸಹಕರಿಸಿದರು.
ಕೆ.ಆರ್. ರಾಘವೇಂದ್ರ ಆಚಾರ್ಯ ಮಣಿಪಾಲ ಪ್ರಾರ್ಥಿಸಿದರು. ಸರಿಗಮ ಭಾರತಿ ಸಂಗೀತ ವಿದ್ಯಾಲಯದ ನಿರ್ದೇಶಕ ಡಾ. ಉದಯಶಂಕರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾಲಯದ ಗುರು ಉಮಾಶಂಕರಿ ವಂದಿಸಿದರು. ಶಿಲ್ಪಾ ಜೋಶಿ ಕಾರ್ಯಕ್ರಮ ನಿರ್ವಹಿಸಿದರು.