ಶಿವಮೊಗ್ಗ: ಮುಂದಿನ ಶೈಕ್ಷಣಿಕ ಸಾಲಿನಿಂದಲೇ ರಾಜ್ಯದಲ್ಲಿ 8ರಿಂದ 12ನೇ ತರಗತಿಯವರೆಗಿನ ಎಲ್ಲ ಮಕ್ಕಳ ಪಠ್ಯದ ಜತೆಗೆ ಕೌಶಲ ತರಗತಿಗಳನ್ನು ಆರಂಭಿಸಲು ಉದ್ದೇಶಿಸಿದ್ದು, ಶೀಘ್ರದಲ್ಲಿ ವಿವರಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಚಾಲುಕ್ಯನಗರದ ಸಾಹಿತ್ಯ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಹೆಸರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಗ್ರಂಥಾಲಯಕ್ಕೆ 5 ಲಕ್ಷ ರೂ.ಗಳ ಚೆಕ್ ಅನ್ನು ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಅವರಿಗೆ ಹಸ್ತಾಂತರಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯದ ಭಾಗವಾಗಿದ್ದು ಕನ್ನಡ ಭಾಷೆಯ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಶ್ರಮಿಸಲಿದೆ ಎಂದರು.
ಕನ್ನಡವನ್ನು ಶಾಲೆಗಳನ್ನು ಇನ್ನೂ ಚೆನ್ನಾಗಿ ಓದಿಸುವ, ಮಕ್ಕಳು ಕನ್ನಡ ಭಾಷೆಯ ಸೊಗಡು, ಶ್ರೀಮಂತಿಕೆಯನ್ನು ಅರ್ಥೈಸಿಕೊಳ್ಳಲು ಅನುಕೂಲವಾಗುವಂತೆ ಸಂಶೋಧನಾತ್ಮಕ, ಪ್ರಾಯೋಗಿಕ ಸಲಹೆಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿದಲ್ಲಿ ಅದರ ಅನುಷ್ಠಾನಕ್ಕಾಗಿ ಕ್ರಮ ಕೈಗೊಳ್ಳಲಾಗುವುದು. ಪಾಲಕರು ತಮ್ಮ ಮಕ್ಕಳಿಗೆ ಕನ್ನಡ ಭಾಷೆಯಲ್ಲಿಯೇ ಪ್ರಾಥಮಿಕ ಶಿಕ್ಷಣ ಕೊಡಿಸಲು ಮುಂದಾಗುವಂತೆ ಅವರು ಮನವಿ ನೀಡಿದರು.
ಮಕ್ಕಳ ಆರ್ಥಿಕ ಸಂಕಷ್ಟವನ್ನು ಅರಿತು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವಂತೆ ಎಸ್‌ಎಸ್‌ಎಲ್ಸಿ ನಂತರದ ಶಿಕ್ಷಣದೊಂದಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಚಿತವಾಗಿ ವಿಶೇಷ ತರಗತಿಗಳನ್ನು ನಡೆಸಲಾಗುತ್ತಿದೆ ಎಂದರು.
ಸರ್ಕಾರಿ ಶಾಲೆಗಳಂತೆಯೇ ರಾಜ್ಯದ ಎಲ್ಲ ಗ್ರಂಥಾಲಯಗಳಿಗೆ ಉಚಿತ ವಿದ್ಯುತ್ ಮತ್ತಿತರ ಸೌಲಭ್ಯಗಳನ್ನು ಒದಗಿಸಿ, ಗ್ರಂಥಾಲಯದ ಕಾರ್ಯಾವಧಿಯನ್ನು ವಿಸ್ತರಿಸಲಾಗುವುದು. ಅಲ್ಲದೇ ಸಿಬ್ಬಂದಿ ಕೊರತೆಯನ್ನು ನೀಗಿಸಲು ಗಮನಹರಿಸಲಾಗುವುದು ಎಂದ ಅವರು, ಗ್ರಂಥಾಲಯದಲ್ಲಿನ ಹಲವು ನ್ಯೂನತೆಗಳನ್ನು ಈಗಾಗಲೇ ಗುರುತಿಸಿದ್ದು, ಅವರ ವ್ಯವಸ್ಥಿತ ನಿರ್ವಹಣೆಗಾಗಿ ಇಲಾಖೆಗೆ ಹೊಸದಾಗಿ ನಿಯೋಜತ ಅಧಿಕಾರಿಗಳಿಗೆ ಅದರ ಹೊಣೆಗಾರಿಕೆ ವಹಿಸಲಾಗಿದೆ. ಗ್ರಂಥಾಲಯಗಳಲ್ಲಿ ಡಿಜಿಟಲ್ ವ್ಯವಸ್ಥೆ ಇರುವುದರಿಂದ ಗ್ರಂಥಾಲಯಗಳು ನಿರಂತರವಾಗಿ ಸಾರ್ವಜನಿಕರಿಗೆ ಲಭ್ಯವಿರುವಂತೆ ಕ್ರಮಕೈಗೊಳ್ಳಲಾಗುವುದು. ತಜ್ಞರ ಸಲಹೆ ಪಡೆದು ಡಿಜಿಟಲ್ ಲೈಬ್ರರಿ ವ್ಯವಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಯತ್ನಿಸಲಾಗುವುದು ಎಂದರು.