ಚಿತ್ರದುರ್ಗ: ಕಾರ್ಮಿಕ ಇಲಾಖೆ, ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದಲ್ಲಿ ಜು.12 ರಂದು ಬೆಳಗ್ಗೆ 11ಕ್ಕೆ ನಗರದ ಎಸ್.ಜಿ. ಕಲ್ಯಾಣ ಮಂಟಪದಲ್ಲಿ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್‌ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಉದ್ಘಾಟಿಸುವರು. ಸಂಸದ ಗೋವಿಂದ ಎಂ. ಕಾರಜೋಳ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಉಪಸ್ಥಿತರಿರುವರು. ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ, ಮಂಡಳಿ, ಪ್ರಾಧಿಕಾರ, ಆಯೋಗ ಹಾಗೂ ನಗರಭೆ ಅಧ್ಯಕ್ಷರು, ಅಧಿಕಾರಿಗಳು, ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು, ಕಾರ್ಮಿಕ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಅಂಗವಿಕಲರ ಆರೈಕೆದಾರರಿಗೆ ಪ್ರೋತ್ಸಾಹಧನ
ಚಿತ್ರದುರ್ಗ: ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸೆರಬ್ರಲ್ ಪಾಲ್ಸಿ, ಮಸ್ಕುಲರ್ ಡಿಸ್ಟೋಫಿ, ಪಾರ್ಕಿನ್ಸನ್ಸ್ ಮತ್ತು ಮಲ್ಟಿಪಲ್ ಸ್ಕ್ಲೆರೊಸಿಸ್, ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ(ಶ್ರವಣ,ಅಂಧತ್ವ) ಕಾಯಿಲೆಯಿಂದ ಬಳಲುತ್ತಿರುವ ಶೇ.75 ಮತ್ತು ಅದಕ್ಕಿಂತ ಹೆಚ್ಚಿನ ನ್ಯೂನತೆ ಹೊಂದಿರುವ ಅಂಗವಿಕಲರ ಆರೈಕೆದಾರರಿಗೆ ಪ್ರತಿ ಒಂದು ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತದೆ. ಆಸಕ್ತರು ಜು. 31ರೊಳಗೆ ಅರ್ಜಿ ಸಲ್ಲಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ. ವೈಶಾಲಿ ತಿಳಿಸಿದ್ದಾರೆ.