ಜಿಲ್ಲೆ

ಡಿ.11ಮತ್ತು 12ರಂದು ಸಹ್ಯಾದ್ರಿಯಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್

Mangaluru - Hariprasad Rai


ಮಂಗಳೂರು : ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಸಾಫ್ಟ್‌ವೇರ್ ಆವೃತ್ತಿ) 2024ರ ಅಂತಿಮ ಸ್ಪರ್ಧೆ ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನಲ್ಲಿ ಡಿ.11ಮತ್ತು 12ರಂದು ನಡೆಯಲಿದೆ. ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ ಮತ್ತು ಎಐಸಿಟಿಇ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದ ಎಂದು ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಡಾ. ಎಸ್.ಎಸ್. ಇಂಜಗನೇರಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ 2017ರಿಂದ ಭಾರತ ಸರ್ಕಾರದಿಂದ ನಡೆಸುವ ವಾರ್ಷಿಕ ಕಾರ್ಯಕ್ರಮವಾಗಿದೆ. ವಿದ್ಯಾರ್ಥಿಗಳಲ್ಲಿ ನಾವೀನ್ಯತೆ, ತರಗತಿ ಹೊರಗಿನ ಚಿಂತನೆ ಮತ್ತು ಸಮಸ್ಯೆ ಬಗೆಹರಿಸುವ ಸಾಮರ್ಥ್ಯ, ಸಾಮಾಜಿಕ ಸವಾಲುಗಳನ್ನು ಎದುರಿಸುವ ಮೂಲಕ ಭಾರತ ಕ್ರಿಯಾತ್ಮಕ ವಿದ್ಯಾರ್ಥಿಗಳನ್ನಾಗಿ ರೂಪಿಸುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ. ಈ ವರ್ಷ ಹ್ಯಾಕಥಾನ್‌ನಲ್ಲಿ 5 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸ್ಪರ್ಧೆಯು ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಎಂಬ ಎರಡು ವಿಭಾಗಗಳಲ್ಲಿ ನಡೆಯಲಿದ್ದು, ಗ್ರಾಂಡ್ ಫಿನಾಲೆ ದೇಶದ 51 ಕೇಂದ್ರಗಳಲ್ಲಿ ನಡೆಯುತ್ತದೆ. ಸಹ್ಯಾದ್ರಿ ಕಾಲೇಜು ಈ ಕಾರ್ಯಕ್ರಮಕ್ಕಾಗಿ ಆಯ್ಕೆಯಾದ ಕರ್ನಾಟಕದ ಒಂಭತ್ತು ನೋಡಲ್ ಕೇಂದ್ರಗಳಲ್ಲಿ ಒಂದಾಗಿದೆ ಮತ್ತು ಎರಡನೆ ಬಾರಿಗೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ ಎಂದು ಸಂಘಟಕ ಡಾ. ಮಂಜಪ್ಪ ಮಾಹಿತಿ ನೀಡಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹ್ಯಾಕಥಾನ್‌ಗೆ ಚಾಲನೆ ನೀಡಲಿದ್ದಾರೆ. ಸಹ್ಯಾದ್ರಿ ಕಾಲೇಜಿನಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ಏರೋಸ್ಪೇಸ್ ವಿಜ್ಞಾನಿ ಡಾ.ಬಿ.ಎನ್.ಸುರೇಶ್, ಸಹ್ಯಾದ್ರಿ ಕಾಲೇಜಿನ ಅಧ್ಯಕ್ಷ ಮಂಜುನಾಥ ಭಂಡಾರಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ 30 ತಂಡಗಳಲ್ಲಿ ನಡೆಯಲಿದ್ದು, ಪ್ರತಿ ತಂಡದಲ್ಲಿ 6 ವಿದ್ಯಾರ್ಥಿಗಳು ಸೇರಿ ಒಟ್ಟು 180 ವಿದ್ಯಾರ್ಥಿಗಳು ಭಾಗವಹಿಲಿದ್ದಾರೆ. ಹೆಚ್ಚುವರಿಯಾಗಿ 30 ಮಾರ್ಗದರ್ಶಕರು ದೇಶದ ವಿವಿಧ ಭಾಗಗಳಿಂದ ಯುವ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಡಾ.ದುಡ್ಡೇಲ ಸಾಯಿ ಪ್ರಶಾಂತ್, ಡಾ. ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.