ಜಿಲ್ಲೆ

ಸರ್ಕಾರಿ ಯೋಜನೆಯ ಅರಿವು ಅವಶ್ಯಕ: ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿ ಶಿಕ್ಷಣಾಧಿಕಾರಿ ಸತೀಶ್‌ಕುಮಾರ್ ಹೇಳಿಕೆ

ಕೆ.ಎನ್.ರಾಘವೇಂದ್ರ

ಮಂಡ್ಯ: ಗ್ರಾಮೀಣ ಜನರಿಗೆ ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ದೊರಕಲು ಯೋಜನೆಗಳ ಅರಿವು ಅವಶ್ಯಕತೆಯಿದೆ ಎಂದು ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿಯ ಶಿಕ್ಷಣಾಧಿಕಾರಿ ಸತೀಶ್‌ಕುಮಾರ್ ತಿಳಿಸಿದರು.

ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಕಾರ್ಮಿಕ ಶಿಕ್ಷಣ ಮತ್ತು ಅಭಿವೃದ್ಧಿ ಮಂಡಳಿ ಬೆಂಗಳೂರು, ಪರಿಸರ ರೂರಲ್ ಡೆವಲಪ್‌ಮೆಂಟ್ ಸೊಸೈಟಿ, ಮಮತೆಯ ಮಡಿಲು, ಗ್ರಾಮ ಪಂಚಾಯಿತಿ ತಗ್ಗಹಳ್ಳಿ ಆಶ್ರಯದಲ್ಲಿ ಮೂರು ದಿನದ ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತೆ ಯೋಜನೆಗಳ ನೋಂದಣಿ ಶಿಬಿರ ಮತ್ತು ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಅಸಂಘಟಿತ ವಲಯ ಹೆಚ್ಚಿದ್ದು, ಕೇಂದ್ರ ಮತ್ತು ರಾಜ್ಯಸರ್ಕಾರ ಸುಸ್ಥಿರ ಜೀವನ ಸಾಗಿಸುವಂತಾಗಲು ಹಲವು ಕಾರ್ಯಕ್ರಮ ರೂಪಿಸಿದ್ದಾರೆ. ಇದನ್ನು ಜನಸಾಮಾನ್ಯರಿಗೆ ತಲುಪಿಸುವ ಕಾಯಕವನ್ನು ಸ್ವಯಂಸೇವಾ ಸಂಸ್ಥೆಗಳ ಮೂಲಕ ಸರ್ಕಾರ ಮಾಡಲಿದೆ. ಇದರ ಸದುಪಯೋಗವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದರು.

ಪರಿಸರ ಸಂಸ್ಥೆ ಅಧ್ಯಕ್ಷ ಮಂಗಲ ಎಂ.ಯೋಗೀಶ್ ಮಾತನಾಡಿ, ಗ್ರಾಮ ಸ್ವರೂಪವನ್ನು ಅರ್ಥೈಸಿಕೊಂಡು ಮಹಿಳೆಯರು, ವಿದ್ಯಾರ್ಥಿಗಳು ಅಸಂಘಟಿತ ಕಾರ್ಮಿಕ ವಲಯವನ್ನು ಕೇಂದ್ರೀಕರಿಸಿಕೊಂಡು ಸರಳ ಮಾರ್ಗೋಪಾಯದಲ್ಲಿ ಉಚಿತವಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ನೋಂದಣಿ ಮಾಡಲು ಇದು ಸಕಾಲವಾಗಿದೆ. ಪ್ರತಿಯೊಬ್ಬರೂ ಇದರ ಪ್ರಯೋಜನವನ್ನು ಪಡೆಯಬೇಕೆಂದರು.

ಬ್ಯಾಂಕ್ ಆಫ್ ಬರೋಡಾದ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕಿ ಕೆ.ಪಿ.ಅರುಣಕುಮಾರಿ, ಪಿಡಿಒ ಲಕ್ಷ್ಮೀ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಶ್ರುತಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉದ್ಯೋಗಾಧಿಕಾರಿ ಕನ್ನಯ್ಯಕುಮಾರ್, ಉಪನ್ಯಾಸಕ ಸಿದ್ದೇಶ್ ಇತರರಿದ್ದರು.