ಮಾನ್ವಿಯ ಶಾಸಕರ ಭವನದ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಪಂ ಸಾಮಾನ್ಯ ಸಭೆಯಲ್ಲಿ ಶಾಸಕ ಹಂಪಯ್ಯನಾಯಕ ಮಾತನಾಡಿದರು. ಜಿಪಂ ಉಪ ಕಾರ್ಯದರ್ಶಿ ಶಶಿಕಾಂತ ಶಿವಪುರೆ, ತಾಪಂ ಇಒ ಎಂ.ಡಿ.ಸೈಯದ್ ಪಟೇಲ್ ಇದ್ದರು.  
ಜಿಲ್ಲೆ

ವಸತಿ ನಿಲಯಗಳ ಸಂಪರ್ಕ ರಸ್ತೆಗೆ ಸ್ಥಳ ಪರಿಶೀಲಿಸಿ, ಸಮಾಜ ಕಲ್ಯಾಣ ಇಲಾಖೆಗೆ ಶಾಸಕ ಹಂಪಯ್ಯನಾಯಕ ಸೂಚನೆ

ಮಾನ್ವಿ: ತಾಲೂಕಿನ ಶೈಕ್ಷಣಿಕ ಬೆಳವಣಿಗೆ ಉದ್ದೇಶದಿಂದ ವಸತಿ ಶಾಲೆಗಳನ್ನು ಮಂಜೂರು ಮಾಡಿಸಿದ್ದು, ಇವುಗಳಿಗೆ ಕೂಡಲೇ ಸಂಪರ್ಕ ರಸ್ತೆ ಮಾಡುವಂತೆ ಶಾಸಕ ಹಂಪಯ್ಯನಾಯಕ, ಸಮಾಜ ಕಲ್ಯಾಣ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ವಿಜಯಕುಮಾರ್‌ಗೆ ಸೂಚಿಸಿದರು.

ಪಟ್ಟಣದ ಶಾಸಕರ ಭವನದ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಮಾತನಾಡಿದರು. ಪಟ್ಟಣ ಹೊರವಲಯದಲ್ಲಿ ನಿರ್ಮಾಣ ಮಾಡಲಾದ ಸಮಾಜ ಕಲ್ಯಾಣ ಇಲಾಖೆಯ ಮುರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಇತರ ಇಲಾಖೆಯ ಮೂರು ವಸತಿ ಶಾಲೆಗಳಿಗೆ ಸಂಪರ್ಕ ರಸ್ತೆ ಇಲ್ಲ. ತಹಸೀಲ್ದಾರ್ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳೊಂದಿಗೆ ಶೀಘ್ರ ಸ್ಥಳ ಪರಿಶೀಲಿಸಿ ವರದಿ ನೀಡಿದರೆ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿ ವಸತಿ ನಿಲಯಗಳಿಗೆ ಸಂಪರ್ಕ ರಸ್ತೆ ಮಾಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ತಾಲೂಕಿನ ಹಲವು ಗ್ರಾಮಗಳಿಗೆ ಕುಡಿವ ನೀರಿನ ಕೊರತೆಯಿದ್ದು, ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಿಲ್ಲ. ಶುದ್ಧ ನೀರಿನ ಘಟಕಗಳು ಮಂಜೂರಾಗಿದ್ದರೂ ಅವುಗಳ ನಿರ್ಮಾಣಕ್ಕೆ ಟೆಂಡರ್ ಕರೆಯದೆ ನಿರ್ಲಕ್ಷ ಮಾಡಲಾಗುತ್ತಿದೆ. ಕೂಡಲೇ ಜನರಿಗೆ ಶುದ್ಧ ಕುಡಿವ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ನೈರ್ಮಲ್ಯ ಇಲಾಖೆ ಅಧಿಕಾರಿ ಶಶಿಕಾಂತ ವಂದಲಿಗೆ ಸೂಚಿಸಿದರು.

ಜಿಪಂ ಉಪಕಾರ್ಯದರ್ಶಿ ಹಾಗೂ ತಾಪಂ ಆಡಳಿತಾಧಿಕಾರಿ ಶಶಿಕಾಂತ ಶಿವಪುರೆ ಮಾತನಾಡಿ, ಶಾಲೆ, ಕಾಲೇಜು, ಅಂಗನವಾಡಿಗಳಿಗೆ ಅಗತ್ಯ ಕಟ್ಟಡಗಳನ್ನು ನರೇಗಾ ಯೋಜನೆಯಡಿ ನಿರ್ಮಾಣ ಮಾಡಿ ಶುದ್ಧ ಕುಡಿವ ನೀರಿನ ಸೌಲಭ್ಯ ಕಲ್ಪಿಸಬೇಕು. ಭತ್ತಕ್ಕೆ ಪರ್ಯಾಯವಾಗಿ ತೋಟಗಾರಿಕೆ ಬೆಳೆಗಳನ್ನು ನರೇಗಾ ಯೋಜನೆಯಡಿ ಬೆಳೆಯಲು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ವಿವಿಧ ಇಲಾಖೆ ಅಧಿಕಾರಿಗಳು ತಮ್ಮ ಇಲಾಖೆಯ ವರದಿಯನ್ನು ಸಭೆಯಲ್ಲಿ ಮಂಡಿಸಿದರು. ತಾಪಂ ಇಒ ಎಂ.ಡಿ.ಸೈಯದ್ ಪಟೇಲ್, ಸಹಾಯಕ ಕೃಷಿ ನಿರ್ದೇಶಕ ಹುಸೇನ್ ಸಾಹೇಬ್, ಬಿಇಒ ಚಂದ್ರಶೇಖರ ದೊಡ್ಡಮನಿ, ವಿವಿಧ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಇದ್ದರು.