ಮಂಡ್ಯ: ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಹಾಗೂ ವಿಚಾರಣೆ ವಿರೋಧಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆದಾಯ ತೆರಿಗೆ ಕಾರ್ಯಾಲಯದವರೆಗೆ ಮೆರವಣಿಗೆ ನಡೆಸಿ, ಬಳಿಕ ಅಲ್ಲಿಯೇ ಧರಣಿ ಕುಳಿತು ಕೇಂದ್ರ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಉಸ್ತುವಾರಿಯೂ ಆದ ಮಾಜಿ ಶಾಸಕ ವಾಸು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನವನ್ನು ಮಾಡಿ ಪಕ್ಷ ಎಂದರೆ ಅದು ಕಾಂಗ್ರೆಸ್. ಪ್ರಧಾನ ಮಂತ್ರಿ ಆಗುವ ಅವಕಾಶವಿದ್ದರೂ ಬೇರೆಯವರಿಗೆ ದಾನ ಮಾಡಿದಂತಹ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ವಿಚಾರಣೆ ನೆಪದಲ್ಲಿ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ರಮೇಶ ಬಂಡಿಸಿದ್ದೇಗೌಡ, ಡಾ.ಎಚ್.ಎನ್.ರವೀಂದ್ರ ಇತರರಿದ್ದರು.