ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂನಲ್ಲಿ (ವೀರಭೂಮಿ) ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿದ್ದು, ಶೀಘ್ರವೇ ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ತಿಳಿಸಿದರು.
ಖಾನಾಪುರ ತಾಲೂಕಿನ ನಂದಗಡದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯಕ್ಕೆ ಸೋಮವಾರ ಭೇಟಿ ನೀಡಿ ಅಂತಿಮ ಹಂತದ ಕಾಮಗಾರಿ ಕುರಿತು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಹಾಗೂ ನಂದಗಡ ಮ್ಯೂಸಿಯಂ ಸೇರಿ ಒಟ್ಟು 261 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ. 59 ಕೋಟಿ ರೂ.ವೆಚ್ಚದಲ್ಲಿ ಒಟ್ಟು 13 ಎಕರೆ ಜಾಗದಲ್ಲಿ ನಂದಗಡ ಮ್ಯೂಸಿಯಂ ನಿರ್ಮಾಣ ಮಾಡಲಾಗಿದೆ. ಕಾಂಪೌಂಡ್, ರಸ್ತೆ, ಕಲಾಕೃತಿ ಸೇರಿದಂತೆ ಅಗತ್ಯ ಕಾಮಗಾರಿ ಮುಕ್ತಾಯಗೊಂಡಿದೆ. ಸಿನಿಮಾ ಆ್ಯನಿಮೇಟರ್ ವಿದ್ಯುನ್ಮಾನ ತಂತ್ರಜ್ಞಾನ ಅಳವಡಿಸಲಾಗಿದೆ ಎಂದು ತಿಳಿಸಿದರು.
ಕೆರೆಯಲ್ಲಿ ಮೂರ್ತಿ ಸ್ಥಾಪನೆ: ಯುವ ಪೀಳಿಗೆಗೆ ಇತಿಹಾಸ ಪರಿಚಯಿಸುವ ಪ್ರಯತ್ನ ಸರ್ಕಾರ ಮಾಡುತ್ತಿದೆ. ನಂದಗಡದ ಕೆರೆಯಲ್ಲಿ ಮೂರ್ತಿ ಸ್ಥಾಪನೆ ಮಾಡಲಾಗುವುದು. ಜನರಿಗೆ ಅನುಕೂಲವಾಗುವ ಪ್ರವೇಶ ದರ ನಿಗದಿ ಪಡಿಸಿ ಜಿಲ್ಲೆಯಲ್ಲಿ ಅತ್ಯುತ್ತಮ ಪ್ರವಾಸಿ ತಾಣವಾಗಿ ಮಾರ್ಪಾಡು ಮಾಡಲು ಈಗಾಗಲೇ ಯೋಜನೆ ರೂಪಿಸಲಾಗಿದ್ದು, ಶೀಘ್ರವೇ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.
ಕಾಮಗಾರಿ ಪರಿಶೀಲನೆ: ಇದಕ್ಕೂ ಮುನ್ನ ಸಚಿವರು, ನಂದಗಡ ಮ್ಯೂಸಿಯಂ ವೀರಭೂಮಿ, ವಸ್ತು ಸಂಗ್ರಹಾಲಯ, ಮ್ಯೂಸಿಯಂ ಮುಖ್ಯ ದ್ವಾರ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಶೌಚಗೃಹ ಕಾಮಗಾರಿ ಪರಿಶೀಲನೆ ನಡೆಸಿದರು. ನಂತರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಮಾಧಿ ಸ್ಥಳ ಮತ್ತು ರಾಯಣ್ಣ ಕೆರೆಯಲ್ಲಿ ಪ್ರತಿಮೆ ಸ್ಥಾಪನೆ ಕುರಿತು ಸ್ಥಳ ಪರಿಶೀಲನೆ ನಡೆಸಿದರು. ಕೆರೆ ಅಭಿವೃದ್ಧಿ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಚ್.ಎಂ.ರೇವಣ್ಣ, ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಸದಸ್ಯ ಕಾ.ತ.ಚಿಕ್ಕಣ್ಣ, ಪ್ರಾಧಿಕಾರದ ವ್ಯವಸ್ಥಾಪಕ ನಿರ್ದೇಶಕಿ ಶಾಲಿನಿ ಇತರರಿದ್ದರು.