ಜಿಲ್ಲೆ

ಕೊಡಗಿನಲ್ಲಿ ಏರ್‌ಸ್ಟ್ರಿಪ್‌ಗೆ ಜಾಗ

ಸುನಿಲ್ ಪೊನ್ನೇಟಿ

ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಏರ್‌ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನ ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಭರವಸೆ ನೀಡಿದ್ದಾರೆ.

ಗುರುವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ಸಣ್ಣ ನೀರಾವರಿ, ವಿಜ್ಞಾನ - ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್ ಬೊಸರಾಜು ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ನಂತರ ಮಾತನಾಡಿದ ಬೋಸರಾಜು ಕೆಲವು ದಿನಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ನಡೆಸಿದ ಕೆಡಿಪಿ ಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂದಿಸಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ನನ್ನ ಗಮನ ಸೆಳೆಯಲಾಗಿತ್ತು. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರೊಂದಿಗೆ ಸಭೆ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ತಾಲೂಕುಗಳಲ್ಲಿ ಮಿನಿ ವಿಧಾನಸೌಧ ಹಾಗೂ ಆಡಳಿತ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಹಾಗೂ ಅನುಮತಿಯನ್ನು ದೊರಕಿಸಿಕೊಡುವ ಬಗ್ಗೆ ಚರ್ಚಿಸಲಾಯಿತು. ಅಲ್ಲದೇ, ಕೊಡಗು ಜಿಲ್ಲೆಯಲ್ಲಿ ಏರ್‌ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಜಾಗವನ್ನು ಜಿಲ್ಲಾಡಳಿತಕ್ಕೆ ವರ್ಗಾವಣೆ ಮಾಡುವ ನಿಟ್ಟಿನಲ್ಲೂ ಚರ್ಚಿಸಲಾಯಿತು. ಈ ಎಲ್ಲಾ ವಿಷಯಗಳ ಬಗ್ಗೆ ಕಂದಾಯ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದರು. ಸಭೆಯಲ್ಲಿ ಶಾಸಕ ಎ.ಎಸ್ ಪೊನ್ನಣ್ಣ ಮತ್ತು ಡಾ. ಮಂತರ್ ಗೌಡ ಹಾಗೂ ಅಧಿಕಾರಿಗಳೂ ಇದ್ದರು.