ಮಡಿಕೇರಿ: ಅಂಧ ವಿಶೇಷಚೇತನರಿಗೆ ಸ್ಥಳ ಪರಿಜ್ಞಾನ ಮತ್ತು ಚಲನವಲನ ವಸತಿಯುತ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ ಇತ್ತೀಚೆಗೆ ಸೋಮವಾರಪೇಟೆಯ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಿತು.
ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಕೊಡಗು ಶಾಖೆ, ತಾಲೂಕು ಒಕ್ಕಲಿಗರ ಸಂಘ ಸೋಮವಾರಪೇಟೆ, ನಗರ ಒಕ್ಕಲಿಗರ ಸಂಘ ಸೋಮವಾರಪೇಟೆ ಹಾಗೂ ಸಮುದಾಯದ ಸಹಭಾಗಿತ್ವದೊಂದಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಪ್ರತೀ ಕಾರ್ಯಕ್ರಮಗಳಿಗೂ ಭಾಗವಹಿಸಿದ್ದು, ಸಂಸ್ಥೆಯು ಕೊಡಗು ಜಿಲ್ಲೆಯಲ್ಲಿ ಅನೇಕ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ. ಇದೀಗ ಸೋಮವಾರಪೇಟೆಯಲ್ಲಿ ಅಂಧ ವಿಶೇಷಚೇತನ ಶಿಬಿರವನ್ನು ಆಯೋಜಿಸಿರುವುದು ಸಂತಸದ ವಿಷಯವಾಗಿದೆ ಎಂದು ಅಬಿಪ್ರಾಯಪಟ್ಟರು.
ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಮೋಹನ್ ರಾಮ್ ಮಾತನಾಡಿ, ಈ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಉತ್ತಮ ಕೆಲಸವಾಗಿದೆ. ಇಂತಹ ಕೆಲಸಗಳಿಂದ ಅಂಧ ವಿಶೇಷಚೇತನರ ಬಾಳಿನಲ್ಲಿ ಬೆಳಕನ್ನು ಮೂಡುವಂತೆ ಮಾಡುತ್ತಿರುವುದಾಗಿ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್‌ನ ಖಜಾಂಚಿ ಡಾ. ಚಂದ್ರಶೇಖರ್, ಸಂಸ್ಥೆಯು ಅನೇಕ ಕಾರ್ಯಕ್ರಮಗಳ ಮೂಲಕ ಸೇವೆಗಳನ್ನು ನೀಡುತ್ತಾ ಬಂದಿದೆ. ನಾಲ್ಕು ದಿನಗಳ ಕಾಲ ನಡೆದ ಶಿಬಿರದಲ್ಲಿ ಭಾಗವಹಿಸಿದ ಅಂಧ ವಿಶೇಷಚೇತನರು ಇದರ ಪ್ರಯೋಜನವನ್ನು ಪಡೆದುಕೊಂಡಿರುವುದಾಗಿ ತಿಳಿಸಿದರು.
ಶಿಬಿರದಲ್ಲಿ ಭಾಗವಹಿಸಿದ್ದ ಕೊಡಗು ಜಿಲ್ಲೆಯ ಒಟ್ಟು ಹದಿನೈದು ಅಂಧ ವಿಶೇಷಚೇತನರಿಗೆ ವೈಟ್ ಕೇನ್‌ಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಭವನದ ಮಾಲಿಕ ಗಣೇಶ್, ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಅಂಕಾಚಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.