ಹನೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ಅಕ್ಷತ್ತದಗಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾದಪ್ಪನಿಗೆ ವಿಶೇಷ ಪೂಜೆ ನೆರವೇರಿದ್ದು, ಬೆಳಗ್ಗೆ ತುಂತುರು ಮಳೆ ನಡುವೆಯೂ ಸಾವಿರಾರು ಭಕ್ತರು ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಅಮಾವಾಸ್ಯೆಯ ಹಿನ್ನೆಲೆಯಲ್ಲಿ ದೇಗುಲವನ್ನು ವಿವಿಧ ಪುಷ್ಪ ಹಾಗೂ ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಗೋಪುರವನ್ನು ವಿವಿಧ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುವಂತೆ ವ್ಯವಸ್ಥೆ ಮಾಡಲಾಗಿತ್ತು. ಬೇಡಗಂಪಣ ಸರದಿ ಅರ್ಚಕರಿಂದ ಸ್ವಾಮಿಗೆ ಅಮಾವಾಸ್ಯೆ ವಿಶೇಷ ಪೂಜೆ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಮಾದಪ್ಪನ ಸನ್ನಿಧಿಗೆ ಭೇಟಿ ನೀಡಿದ್ದರು. ಬೆಳಗ್ಗೆ 6.30 ರಿಂದ ಸುಮಾರು ಒಂದು ಗಂಟೆ ಕಾಲ ತುಂತುರು ಮಳೆಯಾಯಿತು. ಈ ನಡುವೆಯೂ ಭಕ್ತರು ಉತ್ಸಾವಾಧಿ ಸೇವೆ, ಉರುಳು ಸೇವೆ ಹಾಗೂ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾಗಿ ಸ್ವಾಮಿಯ ಕೃಪೆಗೆ ಪಾತ್ರರಾದರು.
ಅಮಾವಾಸ್ಯೆ ವಿಶೇಷ ಪೂಜೆ: ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಬೆಳಗಿನ ಜಾವ 3 ಗಂಟೆಯಿಂದ 6.30 ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಸತ್ತಿಗೆ, ಸೂರಿಪಾನಿ, ಛತ್ರಿ ಚಾಮರ ಹಾಗೂ ವಾದ್ಯಮೇಳದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ ಆಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲನ್ನು ಮೆರವಣಿಗೆಯ ಮೂಲಕ ದೇಗುಲಕ್ಕೆ ತಂದರು. ಸ್ವಾಮಿಗೆ ಸಂಕಲ್ಪಾಧಿ, ಗಣಪತಿ ಪೂಜೆ, ಪಂಚಕಳಸ ಪೂಜೆ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿಯ ಮೂಲಕ ಹಾಲಿನ ಅಭಿಷೇಕ ನೆರವೇರಿಸಿದರು. ಬಳಿಕ 2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ, ನವರತ್ನ ಕೀರಿಟಧಾರಣೆ, ಧೂಪದಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸುವುದರ ಮೂಲಕ ಅಮಾವಾಸ್ಯೆ ಪೂಜೆಯನ್ನು ನೆರವೇರಿಸಲಾಯಿತು. ಬಳಿಕ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು. ಬಹುತೇಕ ಭಕ್ತರು ಸರದಿ ಸಾಲಿನಲ್ಲಿ ತೆರಳಿ ದೇವರ ದರ್ಶನ ಪಡೆದರು. ಕೆಲವರು 500 ರೂ. ಟಿಕೆಟ್ ಖರೀದಿಸಿ ರಾಜಗೋಪುರದ ವಿಶೇಷ ಕೌಂಟರ್ ಮೂಲಕ ತೆರಳಿ ದರ್ಶನ ಪಡೆದರು.
ಉತ್ಸವದಲ್ಲಿ ಭಾಗಿಯಾದ ಭಕ್ತರು: ಆಗಮಿಸಿದ್ದ ಭಕ್ತರು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಉತ್ಸವಗಳು ಬೆಳಗ್ಗೆಯಿಂದ ಸಂಜೆಯವರೆಗೆ ಜರುಗಿತು. ಈ ವೇಳೆ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವ ಮೂರ್ತಿಗಳಿಗೆ ಧನ, ಧಾನ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಸೆದು ದೇವರ ಕೃಪೆಗೆ ಪಾತ್ರರಾದರಲ್ಲದೆ ಉಘೇ ಮಾದಪ್ಪ ಉಘೇ.. ಜೈ ಮಹತ್ ಮಲೆಯಾ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಭಕ್ತಿ ಭಾವವನ್ನು ಮೆರೆದರು.
ಸೇವೆಗಳಲ್ಲಿ ಭಾಗಿ: ಇನ್ನು ಹರಕೆ ಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆಯನ್ನು ಕೈಗೊಳ್ಳುವುದರ ಮೂಲಕ ಹರಕೆ ತೀರಿಸಿದರು. ಚಾಮರಾಜನಗರ ಸೇರಿದಂತೆ ಮೈಸೂರು, ಬೆಂಗಳೂರು, ಬಿಡದಿ, ರಾಮನಗರ, ಕನಕಪುರ, ಚನ್ನಪಟ್ಟಣ, ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ಜಿಲ್ಲೆಗಳಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು. ಇದರಲ್ಲಿ ‘ಶಕ್ತಿ’ ಯೋಜನೆಯ ಪರಿಣಾಮ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಅನ್ನ ದಾಸೋಹ, ಕುಡಿಯುವ ನೀರು ಹಾಗೂ ಇನ್ನಿತರ ಅಗತ್ಯ ಮೂಲ ಸೌಕರ್ಯ ಒದಗಿಸಲಾಗಿತ್ತು.