ಕಾರ್ಕಳ: ಕಲಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳ ಕಡೆಗೂ ಮಕ್ಕಳು ಮಹತ್ವ ನೀಡಬೇಕು, ಸೋತಾಗ ಕುಗ್ಗದೆ ಸವಾಲಾಗಿ ಸ್ವೀಕರಿಸಿ ಮುನ್ನಡೆಯಬೇಕು. ಕ್ರೀಡೆಯೂ ಬರೀ ಮನೋರಂಜನೆಯನ್ನು ಮಾತ್ರ ನೀಡದೆ ನಮ್ಮ ದೇಹಕ್ಕೂ ಆರೋಗ್ಯವನ್ನು ನೀಡುವಲ್ಲಿ ಸಹಕಾರಿಯಾಗಿದೆ. ಕ್ರೀಡೆ ದೈಹಿಕ ಹಾಗೂ ಮಾನಸಿಕವಾಗಿಯೂ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದು ಕಾರ್ಕಳ ಕ್ರೈಸ್ಟ್‌ಕಿಂಗ್ ಸಂಸ್ಥೆಯ ಪ್ರಾಂಶುಪಾಲ ಲಕ್ಷ್ಮೀನಾರಾಯಣ ಕಾಮತ್ ಹೇಳಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ (ಪದವಿ ಪೂರ್ವ), ಕರ್ನಾಟಕ ಸರ್ಕಾರ ಹಾಗೂ ಕ್ರೈಸ್ಟ್‌ಕಿಂಗ್ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಕಾರ್ಕಳ ಗಾಂಧೀ ಮೈದಾನದಲ್ಲಿ ನಡೆದ ಪದವಿಪೂರ್ವ ವಿಭಾಗದ ಕಾರ್ಕಳ ತಾಲೂಕುಮಟ್ಟದ ಬಾಲಕರ ಹಾಗೂ ಬಾಲಕಿಯರ ವಿಭಾಗದ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಕಾರ್ಕಳ ಪುರಸಭೆ ಅಧ್ಯಕ್ಷ ಯೋಗೀಶ ದೇವಾಡಿಗ ಪಂದ್ಯಾಟಕ್ಕೆ ಚಾಲನೆ ನೀಡಿಸಿದರು. ಸಮಾರಂಭದಲ್ಲಿ ರಾಷ್ಟ್ರಮಟ್ಟದ ದೇಹದಾರ್ಡ್ಯ ಪಟು ಕಾರ್ಕಳದ ಪ್ರವೀಣ್ ದೇವಾಡಿಗ, ಸಂಸ್ಥೆಯ ಪ್ರೌಢಶಾಲಾ ಮುಖ್ಯಶಿಕ್ಷಕಿ ಜೋಸ್ನಾ ಸ್ನೇಹಲತಾ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಯಾನಂದ ಮಲೆಬೆಟ್ಟು, ಕೆಎಂಇಎಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸತೀಶ್ಚಂದ್ರ ಹೆಗ್ಡೆ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ನಿರ್ದೇಶಕ ಕೃಷ್ಣಪ್ರಸಾದ್ ಪಂದ್ಯವನ್ನು ಸಂಘಟಿಸಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ್ ನಾಯ್ಕ ಸ್ವಾಗತಿಸಿದರು. ಲಾವಣ್ಯ ವಂದಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಕಾರ್ಯಕ್ರಮ ನಿರೂಪಿಸಿದರು.