ರಾಯಚೂರು: ವ್ಯಕ್ತಿಯ ಶಾರೀರಿಕ ಬೆಳವಣಿಗೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಅತ್ಯವಶ್ಯವಾಗಿದ್ದು, ಇಂದಿನ ಒತ್ತಡದ ಜೀವನದಲ್ಲಿ ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಮಾನಸಿಕ ನೆಮ್ಮದಿ ದೊರೆಯಲಿದೆ ಎಂದು ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.
ಸ್ಥಳೀಯ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಕಲಬುರಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳ್ಲಲಿ ಪಾಲ್ಗೊಳ್ಳಬೇಕು ಎಂದರು.
ಆತ್ಮವಿಶ್ವಾಸದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಬೇಕು. ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಮೂಲಕ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಪ್ರಯತ್ನಿಸುವ ಮೂಲಕ ರಾಜ್ಯ ಮಟ್ಟದಲ್ಲಿ ಜಿಲ್ಲೆಯ ಕೀರ್ತಿ ಹೆಚ್ಚಾಗುವಂತೆ ಮಾಡಬೇಕು ಎಂದು ರಾಹುಲ್ ತುಕಾರಾಮ್ ಪಾಂಡ್ವೆ ಹೇಳಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಈರೇಶ ನಾಯಕ, ರಾಯಚೂರು ಬ್ಯಾಡ್ಮಿಂಟನ್ ಕ್ಲಬ್ ಪದಾಕಾರಿಗಳಾದ ಶಿವಕುಮಾರ ಪಾಟೀಲ್, ರಂಗಲಿಂಗನಗೌಡ, ಆರ್.ವೆಂಕಟಸ್ವಾಮಿ, ಜಯಕುಮಾರ ಉಪಸ್ಥಿತರಿದ್ದರು.