ಜಿಲ್ಲೆ

ದೈಹಿಕ, ಮಾನಸಿಕವಾಗಿ ಸದೃಢತೆಗೆ ಕ್ರೀಡೆ ಸಹಕಾರಿ

ರಾವಂದೂರು: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢರಾಗಿ ಉತ್ತಮ ಶಿಸ್ತಿನ ವಿದ್ಯಾರ್ಥಿಗಳಾಗಲು ಸಾಧ್ಯವಾಗುತ್ತದೆ ಎಂದು ತಾಲೂಕು ದೈಹಿಕ ಶಿಕ್ಷಣ ಪರೀಕ್ಷಕ ರಮೇಶ್ ತಿಳಿಸಿದ್ದಾರೆ.

ಪಿರಿಯಾಪಟ್ಟಣ ತಾಲೂಕು ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹೋಬಳಿ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.

ಸಮಪ್ರಜ್ಞೆ ಶಿಸ್ತು ಜತೆಗೆ ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಸಹಕಾರಿಯಾಗಿದೆ. ಕ್ರೀಡಾಕೂಟದಲ್ಲಿ ಸೋಲು-ಗೆಲುವನ್ನು ಸಮನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ಉಪನ್ಯಾಸಕ ಸುಭಾಷ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳು ಸಹ ಬಹಳ ಮುಖ್ಯವಾಗಿವೆ. ವಿದ್ಯಾರ್ಥಿಗಳು ಕ್ರೀಡೆಗೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದು, ಉತ್ತಮ ವಿದ್ಯಾರ್ಥಿಗಳಾಗಲು ಕ್ರೀಡೆಯೂ ಸಹ ತುಂಬ ಸಹಕಾರಿಯಾಗಿದೆ ಎಂದು ತಿಳಿಸಿದರು.

ಕ್ರೀಡಾಕೂಟದಲ್ಲಿ ರಾವಂದೂರು ಹೋಬಳಿಯ 9 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಉಪ ಪ್ರಾಂಶುಪಾಲ ಸುರೇಶ್, ಸರ್ಕಾರಿ ನೌಕರರ ಸಂಘದ ಸದಸ್ಯ ಮಹದೇವ್, ರಾಜೇಶ್, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ಜಲೇಂದ್ರ, ರಮೇಶ್, ರಾಜೇಂದ್ರ, ಮಹಾದೇವ್, ದೈಹಿಕ ಶಿಕ್ಷಕರಾದ ವಿಜಯ್, ಸುರೇಶ ನಾಯಕ, ಪ್ರಸನ್ನ ಕುಮಾರ್, ರಮೇಶ್ ಬಾಬು ಇತರರು ಇದ್ದರು.