ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರಸಕ್ತ ಸಾಲಿನಲ್ಲಿ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಯನ್ನು ಜೂ.21ರಂದು ಹೊಸಕೋಟೆಯ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.
ದೇವನಹಳ್ಳಿ ತಾಲೂಕು ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2023-24ನೇ ಸಾಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದ ಸರಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳ ತಾಲೂಕು ಮತ್ತು ಜಿಲ್ಲಾ ಮಟ್ಟದ ಕ್ರೀಡಾಕೂಟ ನಡೆಯಲಿರುವ ಹೊಸಕೋಟೆ ಚನ್ನಭೈರೇಗೌಡ ಕ್ರೀಡಾಂಗಣವನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಹಾಗೂ ತಾಲೂಕು ಮಟ್ಟದಿಂದ ನೌಕರ ಕ್ರೀಡಾಪಟುಗಳು ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಮುಂಜಾಗ್ರತೆ ಅಗತ್ಯ: ಕ್ರೀಡಾಕೂಟ ನಡೆಯುವ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕ್ರೀಡಾಂಗಣದಲ್ಲಿ ಆಂಬುಲೆನ್ಸ್ ಸೇವೆ ಮಾಡಲು ಆರೋಗ್ಯ ಇಲಾಕೆ ಅಣಿಯಾಗಬೇಕು. ಗಾಯಗೊಂಡ ಕ್ರೀಡಾಪಟುಗಳಿಗೆ ತುರ್ತು ಚಿಕಿತ್ಸೆಗೆ ನೆರವಾಗಬೇಕು ಎಂದು ಸೂಚಿಸಿದರು.
ಕುಡಿಯುವ ನೀರು, ಉಪಹಾರ, ಕುಳಿತುಕೊಳ್ಳಲು ಸೂಕ್ತ ಜಾಗ ಸೇರಿ ಕ್ರೀಡಾಪಟುಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವತ್ತ ಅಧಿಕಾರಿಗಳು ನಿಗಾವಹಿಸಬೇಕು. ತಾಲೂಕು ಮಟ್ಟದಲ್ಲಿ ಆಯಾ ತಾಲೂಕಿನ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್ ಸೇರಿ ಕಾರ್ಯ ನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆಯಾಗಬೇಕು ಹಾಗೂ ಶಿಷ್ಟಾಚಾರದಂತೆ ಜನಪ್ರತಿನಿಧಿಗಳ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಆಯೋಜನೆಯಾಗಬೇಕು ಎಂದು ತಾಕೀತು ಮಾಡಿದರು.
ಈ ಬಾರಿಯೂ ಯಶಸ್ವಿ
ಪ್ರತೀ ವರ್ಷದಂತೆ ಪ್ರಸಕ್ತ ಸಾಲಿನಲ್ಲೂ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆಗೆ ಪೂರ್ವ ಸಿದ್ಧತೆ ನಡೆಯುತ್ತಿದೆ. ಪ್ರತಿ ವರ್ಷದಂತೆ ನಡೆಯುವ ಕ್ರೀಡೆಗಳು ಈ ಬಾರಿಯೂ ಇರಲಿವೆ. ಕ್ರೀಡಾಪಟುಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಹೇಳಿದರು.