ಜಿಲ್ಲೆ

ರಜೆ ದಿನ ದೇವರ ದರ್ಶನವಿಲ್ಲ…!

ನಂಜನಗೂಡು, ಚಾಮುಂಬೆಟ್ಟದಲ್ಲಿ ಈ ನಿಯಮ ಜಾರಿ

ಮೈಸೂರು: ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನಗಳಲ್ಲಿ ಪ್ರತಿ ಶನಿವಾರ, ಭಾನುವಾರ ಮತ್ತು ಸಾರ್ವಜನಿಕ ರಜಾ ದಿನಗಳಂದು ಸಾರ್ವಜನಿಕರಿಗೆ ದೇವರ ದರ್ಶನ ನಿಷೇಧಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಆದೇಶ ಹೊರಡಿಸಿದ್ದಾರೆ.
ರಜಾ ದಿನಗಳಲ್ಲಿ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವುದು ಕಷ್ಟವಾಗುತ್ತದೆ. ದೇವಸ್ಥಾನ ಆವರಣದಲ್ಲಿ ದೇವರ ದರ್ಶನಕ್ಕೆ ಜನರು ಗುಂಪುಗೂಡಿದರೆ ಕರೊನಾ ಎಲ್ಲರಿಗೆ ಸುಲಭವಾಗಿ ಹರಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ಲಾಕ್‌ಡೌನ್ ಸಡಿಲಿಕೆ ನಂತರ ಜಿಲ್ಲಾ ವ್ಯಾಪ್ತಿಯ ಎಲ್ಲ ಧಾರ್ಮಿಕ ಸ್ಥಳಗಳು, ಪೂಜಾ ಸ್ಥಳಗಳು, ಆಧ್ಯಾತ್ಮಿಕ ಕೇಂದ್ರಗಳನ್ನು ಷರತ್ತುಗಳ ಆಧಾರದ ಮೇಲೆ ಜೂ.8 ರಂದು ತೆರೆಯಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದರು. ಆದರೆ, ಕರೊನಾ ಹರಡುವ ಭೀತಿಯಿಂದ ಕರ್ನಾಟಕ ಸಾಂಕ್ರಾಮಿಕ ರೋಗಗಳು ಕೋವಿಡ್-19 ರೆಗ್ಯೂಲೇಷನ್-2020ರ ನಿಯಮ 12 ರಲ್ಲಿ ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ -2005 ಕಲಂ 30(2) ಮತ್ತು 34 ರಡಿಯಲ್ಲಿ ದತ್ತವಾದ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ನಂಜನಗೂಡಿನ ಶ್ರೀಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಪ್ರತಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಮತ್ತು ಮಧ್ಯಾಹ್ನ 3.30 ರಿಂದ ಸಂಜೆ 5.30ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಚಾಮುಂಡಿಬೆಟ್ಟಕ್ಕೆ ತೆರಳುವವರು ತಾವರೆಕಟ್ಟೆ ಮಾರ್ಗದಲ್ಲಿ ತೆರಳಬೇಕು. ಉಳಿದ ರಸ್ತೆಗಳಲ್ಲಿ ಪ್ರವೇಶ ನಿಷೇಧಿಸಲಾಗಿದೆ. ನಂಜನಗೂಡು ಶ್ರೀಕಂಠೇಶ್ವರಸ್ವಾಮಿ ದೇವರಿಗೆ ಮುಡಿ ಅರ್ಪಿಸುವುದನ್ನು ನಿಷೇಧಿಸಲಾಗಿದೆ. ದೇವಸ್ಥಾನದಲ್ಲಿ ಪ್ರತಿನಿತ್ಯ ಜರಗುವ ಧಾರ್ಮಿಕ ಕಾರ್ಯಗಳನ್ನು ದೇವಸ್ಥಾನದ ಅರ್ಚಕರು ಮತ್ತು ಸಿಬ್ಬಂದಿ ಉಪಸ್ಥಿತಿಯಲ್ಲಿ ನಡೆಸಬಹುದು.