ಜಿಲ್ಲೆ

ಶ್ರೀರಾಮಚಂದ್ರಾಪುರ ಮಠ ವಿಚಾರಣೆ ಯಥಾಸ್ಥಿತಿ ಆದೇಶ

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಿಸುವ ಹಾಗೂ ಮಠದ ಅವ್ಯವಹಾರಗಳ ಕುರಿತ ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಹೈಕೋರ್ಟ್​ಗೆ ಸುಪ್ರೀಂಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ರಾಮಚಂದ್ರಾಪುರ ಮಠ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾ.ಉದಯ್ ಲಲಿತ್ ಮತ್ತು ನ್ಯಾ. ವಿನೀತ್ ಸರಣ್ ಅವರಿದ್ದ ಪೀಠ, ಈ ಮಧ್ಯಂತರ ನಿರ್ದೇಶನ ನೀಡಿತು. ಇದೇ ವೇಳೆ, ಮೇಲ್ಮನವಿಯಲ್ಲಿರುವ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು.

ಪ್ರಕರಣವೇನು?: ಮಠದ ಆಡಳಿತದಲ್ಲಿ ಅವ್ಯವಹಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ರಾಘವೇಶ್ವರ ಭಾರತೀ ಶ್ರೀಗಳನ್ನು ಪೀಠಾಧಿಪತಿ ಸ್ಥಾನದಿಂದ ಕೆಳಗಿಸಿ, ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಬೇಕು ಎಂದು ಕೋರಿ ಎದುರ್ಕಳ ಈಶ್ವರ ಭಟ್ ಮತ್ತಿತರರು ಪಿಐಎಲ್ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚಿಸಿತ್ತು. ಮಠಕ್ಕೆ ಆಡಳಿತಾಧಿಕಾರಿ ನೇಮಿಸುವಂತೆ ಅರ್ಜಿದಾರರು ಸಲ್ಲಿಸಿದ್ದ ಮನವಿ ಪರಿಗಣಿಸಿದ್ದ ಸರ್ಕಾರ, ಮಠದ ವಿರುದ್ಧ ಆರೋಪಗಳ ವಿಚಾರಣೆಗೆ ತ್ರಿಸದಸ್ಯ ಸಮಿತಿ ರಚನೆ ಮಾಡಿತ್ತು. ಅದನ್ನು ಮಠ ಏಕಸದಸ್ಯ ಪೀಠದಲ್ಲಿ ಪ್ರಶ್ನಿಸಿತ್ತು.