ಜಿಲ್ಲೆ

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸುರಕ್ಷತೆಗೆ ಅಗತ್ಯ ಕ್ರಮ

Kolar

ಕೋಲಾರ: ಜಿಲ್ಲೆಯಲ್ಲಿ ಜೂ. 25ರಿಂದ ಜು. 4ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧ್ದತೆ ಮಾಡಿಕೊಂಡಿದ್ದು, ಕೋವಿಡ್‌ನಿಂದ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಸುಗಮವಾಗಿ ಪರೀಕ್ಷೆ ನಡೆಯಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಬುಧವಾರ ಪರೀಕ್ಷೆ ಸಿದ್ಧತೆ ಕುರಿತು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಜಾರಿ ಮಾಡಿಸುವ ಜತೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಶಿಕ್ಷಣ ಇಲಾಖೆ ನಡೆಸಿರುವ ಎಸ್ಸೆಸ್ಸೆಲ್ಸಿ ಕಲ್ಪಿತ ಪರೀಕ್ಷೆ ಮಾದರಿಯಲ್ಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 70 ಪರೀಕ್ಷಾ ಕೇಂದ್ರಗಳಿದ್ದು, 20,906 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಹೊರ ರಾಜ್ಯದ 19 ವಿದ್ಯಾರ್ಥಿಗಳಿದ್ದು, ಈಗಾಗಲೆ ಕರೊನಾ ಪರೀಕ್ಷೆಗೆ ಒಳಪಡಿಸಲಾಗಿ ವರದಿ ನೆಗೆಟಿವ್ ಬಂದಿದೆ. ಕಂಟೇನ್ಮೆಂಟ್ ಜೋನ್‌ನಿಂದ ಬರುವ 31 ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ತಲುಪಿಸಲಾಗಿದ್ದು, ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಕಂಟೇನ್ಮೆಂಟ್ ಪ್ರದೇಶದಲ್ಲಿರುವ 1 ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಪರೀಕ್ಷೆ ಬರೆಯಲಿರುವ 3231 ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು 102 ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. 10,000 ವಿದ್ಯಾರ್ಥಿಗಳು ಸ್ವಂತ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಖಾಸಗಿ ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ಆಯಾ ಶಿಕ್ಷಣ ಸಂಸ್ಥೆಗಳು ವಾಹನದ ವ್ಯವಸ್ಥೆ ಕಲ್ಪಿಸಿವೆ ಎಂದರು.

ಕೆಜಿಎಫ್‌ನ ಬಾಲಮಂದಿರದಲ್ಲಿದ್ದ ವಿದ್ಯಾರ್ಥಿನಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಆಕೆಗೆ ಪರೀಕ್ಷೆ ಬರೆಯಲು ಅವಕಾಶವಿಲ್ಲ. ಪೂರಕ ಪರೀಕ್ಷೆಯಲ್ಲಿ ಪರೀಕ್ಷೆ ಬರೆಯಬಹುದು ಎಂದರು.

ಡಿಡಿಪಿಐ ಕೆ.ರತ್ನಯ್ಯ, ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಗೋಷ್ಠಿಯಲ್ಲಿದ್ದರು.

ಜಿಲ್ಲೆಯ ವಿದ್ಯಾರ್ಥಿಗಳು: ಜಿಲ್ಲೆಯಲ್ಲಿ ಹೊಸದಾಗಿ 19727 ವಿದ್ಯಾರ್ಥಿಗಳು, 371 ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ 582 ಅಭ್ಯರ್ಥಿಗಳು, 209 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು, ಹೊಸ ಸ್ಕೀಂ ಪುನರಾವರ್ತಿತ ಅಭ್ಯರ್ಥಿಗಳು 16 ಹಾಗೂ ನ್ಯೂಸ್ಕೀಂ ಖಾಸಗಿ 1 ವಿದ್ಯಾರ್ಥಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ಇದರಲ್ಲಿ 10541 ಮಂದಿ ಬಾಲಕರು,10365 ಮಂದಿ ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ.

ನಿಷೇಧಾಜ್ಞೆ ಜಾರಿ: ಬಂಗಾರಪೇಟೆ -3437, ಕೆಜಿಎಫ್-2693, ಕೋಲಾರ-5366, ಮಾಲೂರು -3169, ಮುಳಬಾಗಿಲು-3353 , ಶ್ರೀನಿವಾಸಪುರ-2888 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬಂಗಾರಪೇಟೆಯ 11, ಕೆಜಿಎಫ್‌ನ 9, ಕೋಲಾರದ 17, ಮಾಲೂರಿನ 9, ಮುಳಬಾಗಿಲಿನ 11 ಹಾಗೂ ಶ್ರೀನಿವಾಸಪುರ 13 ಸೇರಿ 70 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ 144ನೇ ಸೆಕ್ಷನ್ ಅನ್ವಯ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.