ಮಂಡ್ಯ: ಎಸ್‌ಎಸ್‌ಎಲ್ಸಿ ಪರೀಕ್ಷೆ-3 ಜುಲೈನಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳನ್ನು ಮತ್ತೆ 10ನೇ ತರಗತಿಗೆ ನೋಂದಾಯಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜು.5 ರಿಂದ 12 ರವರೆಗೆ ಪರೀಕ್ಷೆ-3 ನಡೆಯಲಿದೆ. ಜಿಲ್ಲೆಯಲ್ಲಿ 4,094 ಮಕ್ಕಳು ಅನುತ್ತೀರ್ಣರಾಗಿದ್ದಾರೆ. ಈ ಪೈಕಿ 3,845 ಮಕ್ಕಳು ಪರೀಕ್ಷೆ-3 ಬರೆಯಲು ನೋಂದಾಯಿಸಿಕೊಂಡಿದ್ದಾರೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ವಿದ್ಯಾರ್ಥಿಗಳು ವಿದ್ಯಾಭ್ಯಾಸ ನಿಲ್ಲಿಸಿ ಯಾವುದಾದರೂ ಉದ್ಯೋಗಕ್ಕೆ ಸೇರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಬಿಇಒಗಳು ಫೇಲಾಗುವ ವಿದ್ಯಾರ್ಥಿಗಳ ಪಟ್ಟಿ ಪಡೆದು ಅವರ ಪಾಲಕರ ಮನವೊಲಿಸಿ ಮತ್ತೆ 10ನೇ ತರಗತಿಗೆ ದಾಖಲು ಮಾಡಿ. ಮುಂದಿನ ವರ್ಷ ಪರೀಕ್ಷೆ ಬರೆಸಿದರೆ ಕಂಡಿತ ಉತ್ತೀರ್ಣರಾಗುತ್ತಾರೆ ಎಂದರು.
ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಶೇ.50ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಶಾಲೆಗಳನ ಮುಖ್ಯೋಪಾಧ್ಯಾಯರ ಸಭೆ ನಡೆಸಿ. ಅವರಿಗೆ ಮುಂದಿನ ಸಾಲಿನಲ್ಲಿ ಫಲಿತಾಂಶ ಉತ್ತಮ ಪಡಿಸಲು ಕಾರ್ಯಾಗಾರ ನಡೆಸಿ. ಪರೀಕ್ಷೆ-3ಕ್ಕೂ ಸಹ ಪರೀಕ್ಷೆ-2ರಲ್ಲಿ ಅನುತ್ತೀರ್ಣರಾದ 249 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿಲ್ಲ. ಈ ವಿದ್ಯಾರ್ಥಿಗಳ ಬಗ್ಗೆ ವಿಶೇಷ ನಿಗಾ ವಹಿಸಿ ಅವರನ್ನು ಸಹ ಶಾಲೆಗೆ ಕರೆತನ್ನಿ ಎಂದರು
ಜಿಲ್ಲೆಯಲ್ಲಿ 12 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ಯಾವುದೇ ಲೋಪವಾಗದಂತೆ ನಡೆಸಲು ಎಲ್ಲ ಕೇಂದ್ರಗಳಿಗೂ ಪ್ರೌಢಶಾಲೆಯ ಮುಖ್ಯ ಶಿಕ್ಷಕರನ್ನು ಅಧೀಕ್ಷಕರನ್ನಾಗಿ ನೇಮಿಸಲಾಗಿದೆ. ಪರೀಕ್ಷೆಯ ದಿನದಂದು ಪ್ರಶ್ನೆಪತ್ರಿಕೆಯನ್ನು ಕೊಂಡೊಯ್ಯಲು ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಜತೆಗೆ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಎಲ್ಲ ಕೇಂದ್ರದಲ್ಲೂ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ಮೂಲಕ ವೀಕ್ಷಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಕರ್ಯವಿರಬೇಕು. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಸಿಬ್ಬಂದಿ ನಿಯೋಜಿಸಲಾಗುವುದು. ಕೇಂದ್ರದ 200 ಮೀಟರ್ ಸುತ್ತಲಿನ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು. ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆಗಳನ್ನು ಸಂರಕ್ಷಿಸಿಡಲು ಸ್ಟ್ರಾಂಗ್ ರೂಂ ನಿರ್ಮಿಸಲಾಗಿದ್ದು, 24 ಗಂಟೆ ಪೊಲೀಸ್ ಬಂದೋಬಸ್ತ್ ನೀಡಲಾಗುವುದು ಎಂದು ವಿವರಿಸಿದರು.
ಸಭೆಯಲ್ಲಿ ಡಿಡಿಪಿಐ ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸೌಭಾಗ್ಯಾ, ಚಂದ್ರಶೇಖರ್, ಚಂದ್ರಕಾಂತಾ ಇತರರಿದ್ದರು.