ತುಮಕೂರು: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ-1 ಜಿಲ್ಲೆಯಲ್ಲಿ ಮೊದಲ ದಿನ ಶುಕ್ರವಾರ ಸುಸೂತ್ರವಾಗಿ ನಡೆಯಿತು. ವಿದ್ಯಾರ್ಥಿಗಳು ಪರೀಕ್ಷೆ ಬರೆದು ಖುಷಿಯಿಂದಲೇ ಹೊರಬಂದರು.
ತುಮಕೂರು ಶೈಕ್ಷಣಿಕ ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆಗೆ ಗೈರಾದವರ ಸಂಖ್ಯೆ 625 . ಜಿಲ್ಲೆಯ ಎರಡೂ ಶೈಕ್ಷಣಿಕ ಜಿಲ್ಲೆಯಲ್ಲಿ 33574 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದು ಅವರಲ್ಲಿ 32949 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 625 ವಿದ್ಯಾರ್ಥಿಗಳು ಗೈರಾಗಿದ್ದು ಒಟ್ಟು 129 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು.
ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಭಾಷೆ ಗೆ 21267 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು 20918 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 349 ವಿದ್ಯಾರ್ಥಿಗಳು ಗೈರಾದರು. ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 12307 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು 12031 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 276 ವಿದ್ಯಾರ್ಥಿಗಳು ಗೈರಾಗಿದ್ದರು.
129 ಪರೀಕ್ಷಾ ಕೇಂದ್ರಗಳು: ತುಮಕೂರು-ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ 129 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿತ್ತು. ಮೊದಲ ದಿನವೇ ಪ್ರಥಮ ಭಾಷೆಯಾಗಿದ್ದರಿಂದ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಕಾಣಿಸಿಕೊಂಡಿದ್ದು ಬೆಳಗ್ಗೆ 1 ಗಂಟೆ ಮುಂಚಿತವಾಗಿ ಕೇಂದ್ರಕ್ಕೆ ಬಂದು ರಿಜಿಸ್ಟರ್ ನಂಬರ್, ಕೊಠಡಿ ಸಂಖ್ಯೆ ನೋಡಿಕೊಂಡು ಅಂತಿಮ ಸಿದ್ಧತೆಯಲ್ಲಿ ತೊಡಗಿದ್ದು ಕಂಡುಬಂತು.
ಮಧುಗಿರಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಬರುವ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಶ್ರೀ ಶಿವಾನಂದ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲಿಸಿದರು.
ಇನ್ನು ತುಮಕೂರು ಶೈಕ್ಷಣಿಕ ಜಿಲ್ಲೆಗೆ ಬರುವ ನಗರದ ಕಾಳಿದಾಸ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಭೇಟಿ ನೀಡಿ ಅಲ್ಲಿನ ಸಿದ್ಧತೆಗಳು, ಮೂಲಸೌಕರ್ಯಗಳನ್ನು ಪರಿಶೀಲಿಸಿದರು.
ಶುಕ್ರವಾರ ಆರಂಭವಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯು ಏ.4 ರ ವರೆಗೆ ನಡೆಯಲಿದ್ದು, ಮೊದಲ ದಿನ ಪ್ರಥಮ ಭಾಷೆ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.15ರ ವರೆಗೆ ಸುಗಮವಾಗಿ ನಡೆಯಿತು.
ವೆಬ್ ಕ್ಯಾಸ್ಟಿಂಗ್
ಜಿಲ್ಲೆಯಲ್ಲಿ ತುಮಕೂರು(ದ) 80 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 49 ಸೇರಿ ಒಟ್ಟು 129 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಮಾರ್ಗಗಳನ್ನು ರಚಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಕ್ರಮವಹಿಸಲಾಯಿತು. ಜಿಲ್ಲಾ ಹಂತದಲ್ಲಿ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ವೀಕ್ಷಣೆ(ವೆಬ್ ಕಾಸ್ಟಿಂಗ್) ವ್ಯವಸ್ಥೆಯಿಂದ ಪರೀೆಯಲ್ಲಿ ನಕಲು ಮಾಡಲು ಅವಕಾಶವಾಗಲಿಲ್ಲ.
ಡಿಸಿ ಭೇಟಿ
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ-1 ಪ್ರಾರಂಭವಾಗಿದ್ದು ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಶ್ರೀ ಶಿವಾನಂದ ಪ್ರೌಢಶಾಲೆಯ ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿದರು. ಪರೀಕ್ಷಾ ಕೇಂದ್ರದಲ್ಲಿ ಬೆಳಕು, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯ, ಮುಂಜಾಗ್ರತಾ ಕ್ರಮವಾಗಿ ತುರ್ತು ಚಿಕಿತ್ಸೆ ನೀಡಲು ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಿರುವ ಬಗ್ಗೆ ಮಾಹಿತಿ ಪಡೆದು ವಿದ್ಯಾರ್ಥಿಗಳು ಆತ್ಮಸ್ಥೆ$ರ್ಯದಿಂದ ಪರೀಕ್ಷೆ ಬರೆಯುವಂತೆ ತಿಳಿಸಿದರು.