ವಿಜಯವಾಣಿ ಸುದ್ದಿಜಾಲ ಗದಗ
ಜೂ. 25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸುರಕ್ಷಿತ ಹಾಗೂ ಪಾರದರ್ಶಕವಾಗಿ ನಡೆಸಬೇಕು ಎಂದು ಸಚಿವ ಸಿ.ಸಿ. ಪಾಟೀಲ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರೊನಾ ವೈರಸ್ ನಿಯಂತ್ರಣಕ್ಕಾಗಿ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಪರೀಕ್ಷೆಗಳು ಸರಾಗವಾಗಿ ನಡೆಯಲು ಶಿಕ್ಷಣ ಇಲಾಖೆಯೊಂದಿಗೆ ವಿವಿಧ ಇಲಾಖೆಗಳ ಸಮನ್ವಯತೆ ಅಗತ್ಯವಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ನೇರ ಹೊಣೆಗಾರರು ಎಂದು ಎಚ್ಚರಿಕೆ ನೀಡಿದರು.
ಕೋವಿಡ್ 19 ನಿಯಂತ್ರಣದ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಬೇಕು.
ಪರೀಕ್ಷೆ ಕೊಠಡಿಯ ಹೊರಗೆ ಮತ್ತು ಒಳಗಡೆ ದೈಹಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ ವಾಗಿದೆ. ಪರೀಕ್ಷೆಗೆ ಹಾಜರಾಗುವ ಮಕ್ಕಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು ಎಂದು ಸಚಿವ ಸಿ.ಸಿ. ಪಾಟೀಲ ಸೂಚಿಸಿದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿ, ಯಾವುದೇ ವಿದ್ಯಾರ್ಥಿಯು ಪರೀಕ್ಷೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು. ಕೋವಿಡ್-19 ನಿಯಂತ್ರಣದ ಜತೆಗೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿರ್ವಹಣೆ ಮಾಡಬೇಕಿದ್ದು, ಅಧಿಕಾರಿಗಳು ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಜಿಪಂ ಸಿಇಒ ಡಾ. ಆನಂದ ಮಾತನಾಡಿ, ಕೋವಿಡ್-19 ನಿಯಂತ್ರಣಕ್ಕಾಗಿ ಮುಂಜಾಗ್ರತ ಕ್ರಮವಾಗಿ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಂಚಿತವಾಗಿಯೇ ಸ್ಯಾನಿಟೈಸರ್ ಸರಬರಾಜು ಮಾಡಲಾಗುವುದು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 13914 ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. 58 ಮುಖ್ಯ ಪರೀಕ್ಷಾ ಕೇಂದ್ರ ಹಾಗೂ 7 ಉಪಕೇಂದ್ರ ಸ್ಥಾಪಿಸಲಾಗುವುದು. ಕೋವಿಡ್ 19 ಸೋಂಕು ತಡೆಗಟ್ಟಲು ದೈಹಿಕ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಹೆಚ್ಚುವರಿ ಕೊಠಡಿ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ ಎನ್., ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ ಬಸರೀಗಿಡದ, ಇತರರು ಇದ್ದರು.
7 ಉಪಕೇಂದ್ರಗಳು: ಸರ್ಕಾರಿ ಪ್ರೌಢಶಾಲೆ ಕೋಟುಮಚಗಿ (ಗದಗ ಗ್ರಾಮೀಣ), ಬಿ.ಎಚ್. ಪಾಟೀಲ ಪ್ರೌಢಶಾಲೆ ಲಕ್ಕುಂಡಿ (ಗದಗ ಗ್ರಾಮೀಣ), ಶ್ರೀ ಹಾಲಶಿವಯೋಗೇಶ್ವರ ಪ್ರೌಢಶಾಲೆ ಪೇಠಾಲೂರ (ಮುಂಡರಗಿ), ಎಸ್.ಜಿ.ಎಂ. ಪ್ರೌಢಶಾಲೆ ಕಲಕೇರಿ (ಮುಂಡರಗಿ), ಶಿವಯೋಗೇಶ್ವರ ಪ್ರೌಢಶಾಲೆ ಹೆಬ್ಬಾಳ (ಶಿರಹಟ್ಟಿ), ಸರ್ಕಾರಿ ಪ್ರೌಢಶಾಲೆ ಮಾಗಡಿ (ಶಿರಹಟ್ಟಿ), ಎಸ್.ಜೆ.ಎಫ್. ಪ್ರೌಢಶಾಲೆ ಬೆಳ್ಳಟ್ಟಿ (ಶಿರಹಟ್ಟಿ) ಸೇರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಹೊಸದಾಗಿ 7 ಉಪಕೇಂದ್ರಗಳನ್ನು ತೆರೆಯಲಾಗಿದೆ.