ಮಡಿಕೇರಿ: ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಪಣ ತೊಡಬೇಕು. ಆ ನಿಟ್ಟಿನಲ್ಲಿ ಅಂಗಡಿ, ಮಾರುಕಟ್ಟೆಗೆ ತೆರಳುವಾಗ ಕಡ್ಡಾಯವಾಗಿ ಬಟ್ಟೆ ಬ್ಯಾಗನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ರಾಷ್ಟ್ರೀಯ ಹಸಿರು ಪಡೆ, ಕೊಡಗು ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ಇವರ ಸಂಯುಕ್ತ ಆಶ್ರಯದಲ್ಲಿ ನೂತನ ನ್ಯಾಯಾಲಯ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
ಏಕ ಬಳಕೆಯ ಪ್ಲಾಸ್ಟಿಕ್‌ಗಳಾದ ತಟ್ಟೆ, ಲೋಟ ಬಳಸುವುದನ್ನು ಈಗಾಗಲೇ ನಿಷೇಧಿಸಲಾಗಿದ್ದು, ಮದುವೆ ಇತರೆ ಕಾರ್ಯಕ್ರಮಗಳಲ್ಲಿ ಬಳಸುವುದು ಕಂಡುಬಂದಲ್ಲಿ ಹತ್ತಿರದ ತಾಲ್ಲೂಕು ಅಥವಾ ಜಿಲ್ಲಾಡಳಿತಕ್ಕೆ ಮಾಹಿತಿ ನೀಡುವಂತಾಗಬೇಕು ಎಂದು ಜಿಲ್ಲಾಧಿಕಾರಿ ಕೋರಿದರು.
ಪರಿಸರ ಅಸಮತೋಲನದಿಂದ ಹಲವು ವೈರುದ್ಯಗಳನ್ನು ಕಾಣುತ್ತೇವೆ. ಮಳೆಗಾಲದಲ್ಲಿ ಮಳೆಯಾಗದಿರುವುದು ಅಥವಾ ಸರಾಸರಿಗಿಂತ ಹೆಚ್ಚು ಮಳೆಯಾಗುವುದು. ಹೀಗೆ ಹಲವು ರೀತಿಯ ವಾತಾವರಣದಲ್ಲಿನ ಅಸಮತೋಲನವನ್ನು ಕಾಣುತ್ತೇವೆ. ಆದ್ದರಿಂದ ಮನೆಯ ಸುತ್ತಮುತ್ತ ಗಿಡ ಮರ ನೆಡಬೇಕು ಎಂದು ಜಿಲ್ಲಾಧಿಕಾರಿ ಸಲಹೆ ಮಾಡಿದ ಅವರು, ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆ ಮಾಡುತ್ತೇವೆ. ಪ್ಲಾಸ್ಟಿಕ್‌ನ್ನು ತ್ಯಜಿಸುತ್ತೇವೆ. ಗಿಡ ನೆಟ್ಟು ಮರ ಬೆಳೆಸುತ್ತೇವೆ ಎಂಬುದು ಬರಬೇಕು ಎಂದು ಜಿಲ್ಲಾಧಿಕಾರಿ ಒತ್ತಿ ಹೇಳಿದರು.
ಕೊಡಗು ಜಿಲ್ಲೆಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ.ಎನ್.ಎನ್.ಮೂರ್ತಿ ಮಾತನಾಡಿ, ಪರಿಸರ ಅಸಮತೋಲನದಿಂದ ಇತ್ತೀಚಿನ ವರ್ಷಗಳಲ್ಲಿ ಎರಡರಿಂದ ಎರಡೂವರೆ ಡಿಗ್ರಿ ಉಷ್ಟಾಂಶ ಹೆಚ್ಚಾಗುತ್ತಿದೆ. ಅರಣ್ಯ ಮತ್ತು ವನ್ಯ ಸಂಪತ್ತು ಸಂರಕ್ಷಣೆ ಮಾಡಿದ್ದಲ್ಲಿ, ಪರಿಸರ ಸಮತೋಲನ ಕಾಣಲು ಸಾಧ್ಯ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಪ್ರತಿಪಾದಿಸಿದರು.
ವಿಶ್ವದಲ್ಲಿ ೪೦೦ ರಿಂದ ೫೦೦ ಮಿಲಿಯನ್ ಮೆಟ್ರಿಕ್ ಟನ್ ನಷ್ಟು ಪ್ಲಾಸ್ಟಿಕ್‌ನ್ನು ಬಳಕೆ ಮಾಡಲಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು. ಬಳಸಿದ ಪ್ಲಾಸ್ಟಿಕ್ ಅನ್ನು ಮರುಬಳಕೆ ಮಾಡಬೇಕು ಎಂದು ತಿಳಿಸಿದರು.
ಭೂಮಂಡಲದಲ್ಲಿ ಭೂಮಿಯ ಮೇಲಿನ ನೀರು ಕಡಿಮೆಯಾಗುತ್ತಿದೆ. ಸಮುದ್ರ ಮಟ್ಟ ಹೆಚ್ಚಾಗುತ್ತಿದೆ. ಆದ್ದರಿಂದ ಮಾನವ ಸಂಕುಲ, ಜೊತೆಗೆ ಅರಣ್ಯ ಮತ್ತು ವನ್ಯ ಸಂಪತ್ತನ್ನು ಉಳಿಸಿ ಬೆಳೆಸುವಂತಾಗಲು. ಗಿಡ ಮರಗಳನ್ನು ಹೆಚ್ಚಾಗಿ ಬೆಳೆಸಬೇಕು. ಪರಿಸರ ಸಂರಕ್ಷಣೆಗೆ ಹಿಂದಿಗಿಂತ ಇಂದು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕರೆ ನೀಡಿದರು.
ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಡಿ.ಟಿ.ಪುಟ್ಟರಂಗಸ್ವಾಮಿ ಮಾತನಾಡಿ, ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕಿದೆ. ಪರಿಸರ ಉಳಿದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಬದುಕು ನಡೆಸಲು ಸಾಧ್ಯ ಎಂದು ತಿಳಿಸಿದರು.
ಜಿ.ಪಂ.ಸಿಇಒ ಡಾ.ಎಸ್.ಆಕಾಶ್‌ರವರು ಪರಿಸರ ಸಂರಕ್ಷಣೆ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ನೆಲ-ಜಲ, ಅರಣ್ಯ, ವನ್ಯಜೀವಿಗಳು, ಪರಿಸರ ಹಾಗೂ ಜೀವ ವೈವಿಧ್ಯ ಸಂರಕ್ಷಣೆಯನ್ನು ಮಾಡುತ್ತೇವೆ. ಪರಿಸರಕ್ಕೆ ಯಾವುದೇ ರೀತಿಯಲ್ಲಿ ಧಕ್ಕೆಯನ್ನುಂಟು ಮಾಡುವುದಿಲ್ಲ. ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಗಿಡ ನೆಟ್ಟು ಅದನ್ನು ಪೋಷಿಸಿ ಬೆಳೆಸುವ ಮೂಲಕ ಪರಿಸರ ಸಂರಕ್ಷಣೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಪ್ರತಿಜ್ಞಾ ವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಏರ್ಪಡಿಸಲಾಗಿದ್ದ ಚಿತ್ರಕಲೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷ ಟಿ.ಜಿ.ಪ್ರೇಮ್‌ಕುಮಾರ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಧೀಶ ಕೆ.ಬಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ರಾಣಿ ಮಾಚಯ್ಯ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪೂವಯ್ಯ, ಶಿವರಾಮ ಬಾಬು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಡಿವೈಪಿಸಿ ಸೌಮ್ಯ, ಜಿಲ್ಲಾ ಸ್ಕೌಟ್ಸ್‌ನ ಆಯುಕ್ತ ಜಿಮ್ಮಿ ಸಿಕ್ವೇರಾ, ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ ಇತರರು ಇದ್ದರು.